ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್ ಬಳಿ ಕಾರು ಮತ್ತು ಸೈಕಲ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರು ಚಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇದರೊಂದಿಗೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.
ಮೃತರನ್ನು ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ (26) ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ಗಂಭೀರ ಗಾಯಗೊಂಡಿದ್ದ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಮಂಗಳವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಅಕ್ಟೋಬರ್ 26ರಂದು ಬೆಳಗ್ಗೆ ಸುಮಾರು 6.15ಕ್ಕೆ ಪ್ರದೀಪ್ ಕಾಂಚನ್ ಅವರು ಹೋಂಡಾ ಸಿಟಿ ಕಾರಿನಲ್ಲಿ ಉಡುಪಿಯಿಂದ ಕುಂದಾಪುರದ ಕಡೆಗೆ ತೆರಳುತ್ತಿದ್ದರು. ಈ ವೇಳೆ ಕೋಟ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದ ಸೈಕಲ್ ಸವಾರ ಗುರುದಾಸ ಶೆಣೈ ಅವರಿಗೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ರಸ್ತೆ ಬದಿಯ ಗ್ರಿಲ್ಸ್ಗೆ ಅಪ್ಪಳಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಸೈಕಲ್ ಸವಾರ ಗುರುದಾಸ ಶೆಣೈ ಅವರು ಘಟನಾ ಸ್ಥಳದಲ್ಲೇ ಮೃತಪಟ್ಟಿದ್ದರು.
ಇದೀಗ ಕಾರು ಚಾಲಕ ಪ್ರದೀಪ್ ಕಾಂಚನ್ ಅವರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಒಂದೇ ಅಪಘಾತದಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಂತಾಗಿದೆ.


