
ಬೆಂಗಳೂರು: ವರದಕ್ಷಿಣೆ ಕಿರುಕುಳ ಹಾಗೂ ಮದುವೆಯಾಗಿ ಮೂರು ವರ್ಷಗಳಾದರೂ ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ದಂಪತಿ ನಡುವೆ ಆಗಾಗ ನಡೆಯುತ್ತಿದ್ದ ಕೌಟುಂಬಿಕ ಕಲಹದಿಂದ ಮನನೊಂದ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಂಗಳೂರು ಉತ್ತರ ತಾಲೂಕಿನ ತೊರೆನಾಗಸಂದ್ರದಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಕೊರಟಗೆರೆ ಮೂಲದ ಕಾವ್ಯ (25) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದು, ಈಕೆ ಮೂರು ವರ್ಷಗಳ ಹಿಂದೆ ಕುಟುಂಬದವರ ಒಪ್ಪಿಗೆಯ ಮೇರೆಗೆ ನವೀನ್ ಎಂಬಾತನನ್ನು ಮದುವೆಯಾಗಿ ನೆಲಮಂಗಲ ಸಮೀಪದ ಸೊಂಡೆಕೊಪ್ಪದಲ್ಲಿ ವಾಸವಾಗಿದ್ದಳು. ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ದಂಪತಿ ನಡುವೆ ಜಗಳವಾಗುತ್ತಿದ್ದು, ಇದರಿಂದ ಬೇಸತ್ತು ಕಾವ್ಯ ತಡರಾತ್ರಿ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಘಟನೆಯ ಮಾಹಿತಿ ತಿಳಿದ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲದ ಶವಾಗಾರಕ್ಕೆ ರವಾನಿಸಿದ್ದಾರೆ. ಸದ್ಯ ಕಾವ್ಯ ಪೋಷಕರು ಪತಿ ನವೀನ್ ವಿರುದ್ಧ ವರದಕ್ಷಿಣೆ ಕಿರುಕುಳದ ದೂರು ದಾಖಲಿಸಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರಿದಿದೆ.


