
ವಿಟ್ಲ: ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಮುಗುಳಿ ಪ್ರದೇಶದಲ್ಲಿ ನಡೆಯುತ್ತಿದ್ದ ಅಕ್ರಮ ಕೆಂಪುಕಲ್ಲು ಹಾಗೂ ಮಣ್ಣು ಗಣಿಗಾರಿಕೆ ಸ್ಥಳದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿ, ಕೃತ್ಯಕ್ಕೆ ಬಳಸಲಾಗುತ್ತಿದ್ದ ವಾಹನಗಳು ಹಾಗೂ ಯಂತ್ರೋಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಜುಲೈ 2ರಂದು ಸಂಜೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಮಾಹಿತಿ ಆಧರಿಸಿ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದ ವೇಳೆ, ಪೊಲೀಸ್ ವಾಹನವನ್ನು ಕಂಡ ಗಣಿಗಾರಿಕೆಯಲ್ಲಿ ತೊಡಗಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ.
ಸ್ಥಳ ಪರಿಶೀಲನೆ ವೇಳೆ ಯಾವುದೇ ಪರವಾನಗಿ ಇಲ್ಲದೆ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿರುವುದು ಪತ್ತೆಯಾಗಿದೆ. ಅಲ್ಲದೆ, ಸಮೀಪದಲ್ಲೇ ಅಕ್ರಮ ಮಣ್ಣು ಗಣಿಗಾರಿಕೆ ನಡೆಯುತ್ತಿರುವುದು, ಮಣ್ಣು ಸಾಗಿಸುವ ಲಾರಿಗಳ ತೂಕ ಪರಿಶೀಲನೆಗಾಗಿ ನಿರ್ಮಿಸಿದ್ದ ವೇ ಬ್ರಿಡ್ಜ್ ಹಾಗೂ ಕಟ್ಟಡ, ಗಣಿಗಾರಿಕೆಗೆ ಬಳಸುತ್ತಿದ್ದ ಯಂತ್ರೋಪಕರಣಗಳು ಕೂಡ ಪತ್ತೆಯಾಗಿವೆ.
ಪೊಲೀಸರು ವಾಹನಗಳು, ಯಂತ್ರೋಪಕರಣಗಳು ಸೇರಿದಂತೆ ಸ್ಥಳದಲ್ಲಿದ್ದ ಸೊತ್ತುಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮುಳಿಗದ್ದೆ ನಿವಾಸಿ ಝಕಾರಿಯಾ ಹಾಗೂ ಇತರರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ.148/2026 ದಾಖಲಿಸಿಕೊಂಡಿದ್ದು, ಭಾರತೀಯ ನ್ಯಾಯ ಸಂಹಿತೆ (BNS) ಕಲಂ 303(2), MMDR Act, 1957ರ ಕಲಂ 4(1), 21 ಹಾಗೂ Karnataka Minor Mineral Concession Rules, 1994ರ ಕಲಂ 3 ಮತ್ತು 44ರಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.


