ಬಂಟ್ವಾಳ: ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಕೆಂಪು ಲ್ಯಾಟರೈಟ್ ಮಣ್ಣನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಘನಲಾರಿಯೊಂದನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಬೈರಿಕಟ್ಟೆಯಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಘನಲಾರಿಯೊಂದು ಕೆಟ್ಟು ನಿಂತು ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.ಈ ವೇಳೆ KA-21-C-4608 ನೋಂದಣಿ ಸಂಖ್ಯೆಯ ಘನಲಾರಿ ರಸ್ತೆಯಲ್ಲಿ ನಿಂತಿರುವುದು ಕಂಡುಬಂದಿದೆ. ಲಾರಿ ಚಾಲಕ ಹಾಸನ ಜಿಲ್ಲೆಯ ಸಕಲೇಶಪುರ ನಿವಾಸಿ ಇರ್ಫಾನ್ ಪಾಷಾ (40) ಅವರನ್ನು ವಿಚಾರಿಸಿದಾಗ, ಲಾರಿ ದುರಸ್ತಿಗೀಡಾಗಿರುವುದಾಗಿ ತಿಳಿಸಿದ್ದಾರೆ.
ಬಳಿಕ ಲಾರಿಯಲ್ಲಿದ್ದ ಮಣ್ಣಿನ ಬಗ್ಗೆ ಪರಿಶೀಲಿಸಿದಾಗ, ಯಾವುದೇ ಪರವಾನಿಗೆ ಅಥವಾ ಸಂಬಂಧಿತ ದಾಖಲೆಗಳಿಲ್ಲದೆ ಕೆಂಪು ಲ್ಯಾಟರೈಟ್ ಮಣ್ಣನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.ಈ ಹಿನ್ನೆಲೆಯಲ್ಲಿ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 229/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 303(2), MMDR ಕಾಯ್ದೆ 1957ರ ಕಲಂ 4(1), 4(1A), 21 ಹಾಗೂ ಕರ್ನಾಟಕ ಸಣ್ಣ ಖನಿಜ ರಿಯಾಯಿತಿ ನಿಯಮಗಳು 1994ರ ಕಲಂ 3 ಮತ್ತು 44ರಂತೆ ಪ್ರಕರಣ ದಾಖಲಿಸಿದ್ದಾರೆ. ಈ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


