
ಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಎಲ್‌ಪಿಜಿ (LPG) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಆತಂಕ ಬೇಡ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.
ಈ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕರು ಯಾವುದೇ ರೀತಿಯ ಗಾಬರಿ ಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.
ತೈಲ ಕಂಪನಿಗಳೊಂದಿಗೆ ಸಭೆ: ರಾಜ್ಯ ಸರ್ಕಾರವು ಪ್ರಮುಖ ತೈಲ ಕಂಪನಿಗಳಾದ IOC, BPC ಮತ್ತು HPC ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಗೃಹ ಬಳಕೆಯ ಸಿಲಿಂಡರ್‌ಗಳ ಲಭ್ಯತೆಯ ಬಗ್ಗೆ ಮಾಹಿತಿ ಪಡೆದಿದೆ. ಸದ್ಯ ರಾಜ್ಯದಲ್ಲಿ ಯಾವುದೇ ಪೂರೈಕೆಯ ಸಮಸ್ಯೆ ಇಲ್ಲ ಎಂದು ಕಂಪನಿಗಳು ಖಾತರಿಪಡಿಸಿವೆ.
ಅನಗತ್ಯ ಬುಕ್ಕಿಂಗ್ ಮಾಡಬೇಡಿ: ಮಾರುಕಟ್ಟೆಯಲ್ಲಿ ಕೃತಕ ಅಭಾವ ಸೃಷ್ಟಿಯಾಗದಂತೆ ತಡೆಯಲು ಗ್ರಾಹಕರು ತುರ್ತು ಮತ್ತು ಅನಗತ್ಯವಾಗಿ ಸಿಲಿಂಡರ್ ಬುಕ್ಕಿಂಗ್ ಮಾಡಬಾರದು ಎಂದು ಸರ್ಕಾರ ಮನವಿ ಮಾಡಿದೆ. ಸಮರ್ಪಕ ಬಳಕೆಯ ಮೂಲಕ ಸಮತೋಲನ ಕಾಪಾಡಲು ತಿಳಿಸಲಾಗಿದೆ.
ಅಗತ್ಯ ಸೇವೆಗಳಿಗೆ ಮೊದಲ ಆದ್ಯತೆ: ಸರ್ಕಾರಿ ಆಸ್ಪತ್ರೆಗಳು, ವಿದ್ಯಾರ್ಥಿನಿಲಯಗಳು, ಅಂಗನವಾಡಿ, ಶಾಲೆ-ಕಾಲೇಜುಗಳು ಮತ್ತು ಕಾರಾಗೃಹಗಳಿಗೆ ಎಲ್‌ಪಿಜಿ ಸರಬರಾಜಿನಲ್ಲಿ ಯಾವುದೇ ಅಡಚಣೆಯಾಗದಂತೆ ತೈಲ ಕಂಪನಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಇನ್ನು ಅನಧಿಕೃತವಾಗಿ ಗ್ಯಾಸ್ ಸಿಲಿಂಡರ್ ಸಂಗ್ರಹಿಸುವುದು, ಸಾಗಿಸುವುದು ಅಥವಾ ಅಕ್ರಮವಾಗಿ ರಿಫಿಲ್ಲಿಂಗ್ ಮಾಡುವುದು ಕಂಡುಬಂದಲ್ಲಿ ಅಗತ್ಯ ವಸ್ತುಗಳ ಕಾಯ್ದೆ 1955 (Essential Commodities Act) ಮತ್ತು LPG ನಿಯಂತ್ರಣ ಆದೇಶ 2000 ಅಡಿಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಸಿದೆ.
ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ಕಟ್ಟುನಿಟ್ಟಿನ ನಿಗಾ ವಹಿಸಲು ಸೂಚನೆ ನೀಡಲಾಗಿದ್ದು, ಕಳ್ಳಸಂತೆ ಮಾಡುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲಾಗುವುದು, ಎಂದು ಆಹಾರ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.


