ಮಂಗಳೂರು : ದಕ್ಷಿಣ ಕನ್ನಡದಲ್ಲಿ ವಿದ್ಯಾರ್ಥಿಗಳಲ್ಲಿ ಕೋವಿಡ್ -19 ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು , 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೋಂಕಿಗೊಳಗಾಗಿದ್ದಾರೆ.ಹಾಗೇ ಜಿಲ್ಲೆಯ 68 ಶಾಲಾ ಶಿಕ್ಷಕರಲ್ಲಿ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಹೆಚ್ಚು ಸೋಂಕು ಇರುವ ಶಾಲೆಗಳನ್ನು ಬಂದ್ ಮಾಡುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.
ಜನವರಿ 1 ರಿಂದ 27 ರವರೆಗೆ ಒಟ್ಟು 421 ಶಾಲಾ ಮಕ್ಕಳು ಮತ್ತು 68 ಶಿಕ್ಷಕರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಮಾಹಿತಿ ಲಭ್ಯವಾಗಿವೆ. ಬೆಳ್ತಂಗಡಿಯಲ್ಲಿ 57 ವಿದ್ಯಾರ್ಥಿಗಳು ಹಾಗೂ 8 ಮಂದಿ ಶಿಕ್ಷಕರಲ್ಲಿ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಮಾಹಿತಿ ನೀಡಿದ್ದಾರೆ .
ಮಂಗಳೂರಿನಲ್ಲಿ ಹೆಚ್ಚು ಸೋಂಕು ಪ್ರಕರಣಗಳು ದಾಖಲಾಗಿವೆ. ಆದರೆ , ಆಸ್ಪತ್ರೆಗೆ ದಾಖಲಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಮಾತ್ರ ಶೂನ್ಯದಲ್ಲಿದೆ ಎಂದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್ ನೋಡಲ್ ಅಧಿಕಾರಿ ಡಾ.ಅಶೋಕ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು , ಐದಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾದರೂ ಎಲ್ಲಾ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಶಾಲೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.