ಸಿದ್ದರಾಮಯ್ಯ ಸರ್ಕಾರದ ಒಂದು ವಿಕೆಟ್ ಪತನ; ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿಎಂ ಸೂಚನೆ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.
ನಿನ್ನೆ ರಾತ್ರಿ ನಡೆದ ಮಹತ್ವದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಈ ನಡುವೆ ಸರ್ಕಾರಕ್ಕೆ ಮುಖಭಂಗವಾಗಬಾರದು ಎಂದು, ಜೊತೆಗೆ ಮುಂದಿನ ತಿಂಗಳು ಮುಂಗಾರು ಅಧಿವೇಶನದಲ್ಲಿ ಈ ಬಗ್ಗೆ ಯಾವುದೇ ಕಾರಣಕ್ಕೆ ಇಕ್ಕಟ್ಟಿಗೆ ಸಿಲುಕದ ಹಾಗೇ ನೋಡಿಕೊಳ್ಳುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಇಂದು ಸಂಜೆ ಗೃಹ ಸಚಿವಲಾಯ ವರದಿಯನ್ನು ಆಧರಿಸಿ ಸಚಿವ ನಾಗೇಂದ್ರ ಅವರು ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಇದಲ್ಲದೇ ತಾವೇ ಖುದ್ದು ಈ ಬಗ್ಗೆ ಹೇಳಿಕೆ ನೀಡುವಂತೆ ಸಿಎಂ ನಾಗೇಂದ್ರ ಅವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಶಿವಮೊಗ್ಗ ಅಧೀಕ್ಷಕ ಚಂದ್ರಶೇಖರ್ ಎನ್ನುವವರು ಆತ್ಮಹತ್ಯೆಗೆ ಶರಣಾಗಿದ್ದರು. ಈ ವೇಳೆ ಅವರು ಸುದೀರ್ಘ ಡೆತ್ ನೋಟ್ ಬರೆದಿಟ್ಟಿದ್ದರು.
ವಾಲ್ಮೀಕಿ ನಿಗಮದಲ್ಲಿ 85 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಚಂದ್ರಶೇಖರನ್ 5 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದರು. ಎಂಡಿ ಜೆ.ಜಿ. ಪದ್ಮನಾಭ್, ಲೆಕ್ಕಾಧಿಕಾರಿ ಪರಶುರಾಮ ದುರುಗಣ್ಣನವರ್, ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶುಚಿಸ್ಮಿತಾ ರವುಲ್ ಎಂಬುವರ ಪಾತ್ರವಿದೆ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದರು.


