
ಕಡಬ: ಚರ್ಚ್‌ನಲ್ಲಿ ಪ್ರಾರ್ಥನೆ ಮುಗಿಸಿ ಮನೆಗೆ ತೆರಳಲು ರಸ್ತೆ ಬದಿಯಲ್ಲಿ ನಿಂತಿದ್ದ ವೃದ್ಧೆಯೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ. ನೆಟ್ಟಣದ ಮೆರೋಂಜಿ ನಿವಾಸಿ ಅನ್ನಮ್ಮ (72) ಮೃತ ದುರ್ದೈವಿ.
ಶನಿವಾರ ಸಂಜೆ ಅನ್ನಮ್ಮ ಅವರು ತಮ್ಮ ಪತಿ ಪಿ.ಪಿ. ಕ್ಸೇವಿಯರ್ ಅವರೊಂದಿಗೆ ನೆಟ್ಟಣದ ಸೈಂಟ್ ಮೇರಿಸ್ ಕ್ಯಾಥೋಲಿಕ್ ಚರ್ಚ್‌ಗೆ ಪ್ರಾರ್ಥನೆಗೆಂದು ತೆರಳಿದ್ದರು. ಪ್ರಾರ್ಥನೆ ಮುಗಿಸಿದ ಬಳಿಕ ಮನೆಗೆ ಹಿಂದಿರುಗಲು ರಸ್ತೆ ದಾಟಿ, ಪತಿಯಿದ್ದ ಕಡೆಗೆ ಬರಲು ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ನೆಟ್ಟಣ ಕಡೆಯಿಂದ ಸುಬ್ರಹ್ಮಣ್ಯದತ್ತ ಸುಜಿತ್ ಎಂಬಾತ ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ಅನ್ನಮ್ಮ ಅವರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಅನ್ನಮ್ಮ ಅವರಿಗೆ ಕಡಬದ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ ವೇಳೆ ಕೊನೆಯುಸಿರೆಳೆದಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮೃತರ ಪತಿ ಪಿ.ಪಿ. ಕ್ಸೇವಿಯರ್ ಅವರು ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


