ಕಡಬ ; ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಉಮೇಶ್ ಶೆಟ್ಟಿ ಪಟ್ಟೆ(67) ಅನಾರೋಗ್ಯದಿಂದ ಜನವರಿ 14ರ ಬುಧವಾರ ಮುಂಜಾನೆ ವಿಧಿವಶರಾಗಿದ್ದಾರೆ.
ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ, ಮಂಗಳವಾರ ತಡರಾತ್ರಿ ಹಠಾತ್ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಹೀಗಾಗಿ ಅವರನ್ನು ತಕ್ಷಣವೇ ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಮುಂಜಾನೆ 1 ಗಂಟೆಯ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ.
ಉಮೇಶ್ ಶೆಟ್ಟಿಯವರು ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸತತ 30 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಮೂಲಕ ದಾಖಲೆ ಬರೆದವರು. ಇವರ ಸುದೀರ್ಘ ಅವಧಿಯಲ್ಲಿ ಸಂಘವು ಅನೇಕ ಅಭಿವೃದ್ಧಿ ಪಥಗಳನ್ನು ಕಂಡಿತ್ತು. ರೈತರ ಮತ್ತು ಸಾಮಾನ್ಯ ಜನರ ನೆಚ್ಚಿನ ನಾಯಕರಾಗಿ ಅವರು ಗುರುತಿಸಿಕೊಂಡಿದ್ದರು.ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಕಾರ್ಯಕರ್ತರಾಗಿದ್ದ ಇವರು, ನೆಲ್ಯಾಡಿ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯರಾಗಿ ಗ್ರಾಮದ ಏಳಿಗೆಗಾಗಿ ಶ್ರಮಿಸಿದ್ದರು. ಪಡುಬೆಟ್ಟು ಸರಕಾರಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾಗಿ ಶಿಕ್ಷಣ ಕ್ಷೇತ್ರಕ್ಕೂ ತಮ್ಮದೇ ಆದ ಕೊಡುಗೆ ನೀಡಿದ್ದರು. ಹತ್ತಾರು ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಸದಾ ಹಸನ್ಮುಖಿಯಾಗಿ ಎಲ್ಲರನ್ನೂ ಅಚ್ಚುಮೆಚ್ಚಿನವರಾಗಿದ್ದರು.
ಮೃತರ ಗೌರವಾರ್ಥವಾಗಿ ಇಂದು (ಜ.14) ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರಜೆ ಘೋಷಿಸಲಾಗಿದೆ ಎಂದು ಸಂಘದ ಸಿಇಒ ದಯಾಕರ ರೈ ತಿಳಿಸಿದ್ದಾರೆ. ಮೃತರ ಅಂತ್ಯಕ್ರಿಯೆಯು ಇಂದು ಮಧ್ಯಾಹ್ನ 1 ಗಂಟೆಗೆ ಪಡುಬೆಟ್ಟುವಿನ ಸ್ವಗೃಹದಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.


