ಕಡಬ: ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ನೀರಾರಿ ಮನೆಯಿಂದ ಕಾಣೆಯಾಗಿದ್ದ ಮೊಹಮ್ಮದ್ ಆಶಿಕ್ ಅವರ ಪತ್ನಿ ಆರ್. ಫೈನ್ ಮಹ್ತಾಬ್ ಪತ್ತೆಯಾಗಿದ್ದಾರೆ. ಶಿವಮೊಗ್ಗದಲ್ಲಿರುವ ತಮ್ಮ ತವರು ಮನೆಯಲ್ಲಿ ಅವರು ಪತ್ತೆಯಾಗಿದ್ದಾರೆ.
ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ನೀರಾರಿ ಮನೆ ನಿವಾಸಿ ಆಶಿಕ್ ಅವರ ಪತ್ನಿ ಆರ್. ಫೈನ್ ಮಹ್ತಾಬ್ ಜೂನ್ 7ರಂದು ಹಠಾತ್ ಆಗಿ ತಮ್ಮ ಮನೆಯಿಂದ ನಾಪತ್ತೆಯಾಗಿದ್ದರು. ಎಲ್ಲಾ ಕಡೆ ಹುಡುಕಾಡಿದರೂ ಪತ್ನಿಯ ಸುಳಿವು ಸಿಗದ ಹಿನ್ನೆಲೆಯಲ್ಲಿ, ಆಕೆಯ ಪತಿ ಆಶಿಕ್ ಕಡಬ ಪೊಲೀಸ್ ಠಾಣೆಗೆ ತೆರಳಿ ಪತ್ನಿ ಕಾಣೆಯಾಗಿರುವ ಬಗ್ಗೆ ಅಧಿಕೃತ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡ ಕಡಬ ಠಾಣೆಯ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಯುವತಿಯ ಪತ್ತೆಗಾಗಿ ತನಿಖೆ ಆರಂಭಿಸಿದ್ದರು. ಯುವತಿಯ ಮೊಬೈಲ್ ನೆಟ್‌ವರ್ಕ್ ಹಾಗೂ ಲಭ್ಯವಿರುವ ಮಾಹಿತಿಗಳ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರಿಗೆ, ಆಕೆ ಶಿವಮೊಗ್ಗದಲ್ಲಿರುವ ತನ್ನ ತವರು ಮನೆಗೆ ತೆರಳಿರುವುದು ತಿಳಿದುಬಂದಿದೆ. ಸದ್ಯ ಯುವತಿ ತವರು ಮನೆಯಲ್ಲಿ ಇರುವುದನ್ನು ಪೊಲೀಸರು ಖಚಿತಪಡಿಸಿಕೊಂಡಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.


