
ಕಡಬ : ಹಣ್ಣು-ಹಂಪಲು ಸಾಗಿಸುತ್ತಿದ್ದ ಪಿಕಪ್ ವಾಹನ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಯುವಕ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಆಲಂಕಾರು ಸಮೀಪದ ನೆಕ್ಕರೆ ಎಂಬಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಮೃತ ದುರ್ದೈವಿಯನ್ನು ಪೊರಂತಿ ನಿವಾಸಿ ತಮೀಮ್ ಎಂದು ಗುರುತಿಸಲಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ಖಲೀಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರಿನಿಂದ ಕಡಬದ ಕಳಾರಕ್ಕೆ ಹಣ್ಣು-ಹಂಪಲು ತುಂಬಿಕೊಂಡು ಬರುತ್ತಿದ್ದ ಪಿಕಪ್ ವಾಹನಕ್ಕೆ, ವಿರುದ್ಧ ದಿಕ್ಕಿನಿಂದ ವೇಗವಾಗಿ ಬಂದ ಕಾರು ನೆಕ್ಕರೆ ತಿರುವಿನಲ್ಲಿ ಮುಖಾಮುಖಿ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿದ್ದು, ಪಿಕಪ್ ವಾಹನದಲ್ಲಿದ್ದ ತಮೀಮ್ ಮತ್ತು ಖಲೀಲ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಸ್ಥಳಕ್ಕಾಗಮಿಸಿದ ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದರಾದರೂ, ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ತಮೀಮ್ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.
ಘಟನಾ ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


