
ಪುತ್ತೂರು: ಮನೆಗೆ ಅಕ್ರಮವಾಗಿ ಪ್ರವೇಶಿಸಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಪುತ್ತೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಕಡಬ ತಾಲೂಕಿನ ನೂಜಿಬಾಳ್ತಿಲ ನಿವಾಸಿ, ರೌಡಿಶೀಟರ್ ಸದ್ದಾಂ (34) ಶಿಕ್ಷೆಗೆ ಗುರಿಯಾದ ಆರೋಪಿ. ಈತನ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ (ಅ.ಕ್ರ. 24/2019) ದಾಖಲಾಗಿತ್ತು. ಅಂದಿನ ಉಪ್ಪಿನಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕೆ. ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸುಮಂಗಲ ಚಕಲಬ್ಬಿ ಅವರು, ಪೋಕ್ಸೋ ಕಾಯ್ದೆಯಡಿ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ ಮತ್ತು ಐ.ಪಿ.ಸಿ 506 ರಡಿ 1 ವರ್ಷ ಕಠಿಣ ಶಿಕ್ಷೆ ಹಾಗೂ ₹25,000 ದಂಡ ವಿಧಿಸಿ ಆದೇಶಿಸಿದ್ದಾರೆ. ಎರಡೂ ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಲ್ಲಿರುತ್ತವೆ. ಸರ್ಕಾರದ ಪರವಾಗಿ ಅಭಿಯೋಜಕ ಪುಷ್ಪರಾಜ್ ಅಡಂತಾಯ ವಾದ ಮಂಡಿಸಿದ್ದರು.


