ಕಾಸರಗೋಡು: ನಿಯಂತ್ರಣ ತಪ್ಪಿದ ಬೋರ್‌ವೆಲ್ ಲಾರಿಯೊಂದು ರಸ್ತೆ ಬದಿಯ ಮನೆಯ ಮೇಲೆ ಉರುಳಿ ಬಿದ್ದ ಪರಿಣಾಮ ಲಾರಿಯಲ್ಲಿದ್ದ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ವೆಸ್ಟ್ ಎಳೇರಿ ಗ್ರಾಮದ ವರಕ್ಕಾಡ್ ಜಂಕ್ಷನ್ ಬಳಿ ಶನಿವಾರ ಮುಂಜಾನೆ ಸಂಭವಿಸಿದೆ.
ಮಧ್ಯಪ್ರದೇಶ ಮೂಲದ ದೇವೇಂದ್ರನ್ ಹಾಗೂ ಛತ್ತೀಸ್‌ಗಢ ಮೂಲದ ಮನಾಸಿರ್ ಮೃತಪಟ್ಟ ದುರದೃಷ್ಟಕರ ಕಾರ್ಮಿಕರು.
ಬೋರ್‌ವೆಲ್ ಕೊರೆಯುವ ಕೆಲಸ ಮುಗಿಸಿಕೊಂಡು ಹಿಂತಿರುಗುತ್ತಿದ್ದ ಲಾರಿಯು ವರಕ್ಕಾಡ್ ಜಂಕ್ಷನ್‌ನ ಕಡಿದಾದ ಇಳಿಜಾರಿನಲ್ಲಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದೆ. ಹತೋಟಿ ಕಳೆದುಕೊಂಡ ಭಾರಿ ಗಾತ್ರದ ಲಾರಿಯು ರಸ್ತೆ ಬದಿಯಲ್ಲಿದ್ದ ಜೇಸನ್ ಎಂಬುವರ ಮನೆಯ ಮೇಲೆ ಉರುಳಿ ಬಿದ್ದಿದೆ. ಅಪಘಾತದ ತೀವ್ರತೆಗೆ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರೂ ಕಾರ್ಮಿಕರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಅಪಘಾತದ ರಭಸಕ್ಕೆ ಮನೆಯ ಮೇಲ್ಛಾವಣಿಯ ಒಂದು ಭಾಗ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಲಾರಿಯ ಭಾರಿ ಗಾತ್ರದ ಕ್ರೇನ್ ಭಾಗವು ಟೆರೇಸ್‌ನ ಬದಿಗೆ ಸಿಲುಕಿಕೊಂಡಿದ್ದರಿಂದ ಮನೆಗೆ ಉಂಟಾಗಬಹುದಾಗಿದ್ದ ಭಾರಿ ಹಾನಿ ತಪ್ಪಿದೆ. ಘಟನೆ ನಡೆದಾಗ ಮನೆಯಲ್ಲಿದ್ದ ಜೇಸನ್ ಹಾಗೂ ಅವರ ಕುಟುಂಬದ ಸದಸ್ಯರು ಯಾವುದೇ ಗಾಯಗಳಿಲ್ಲದೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಜೆಸಿಬಿ ಮತ್ತು ಕ್ರೇನ್ ಬಳಸಿ ಲಾರಿಯನ್ನು ತೆರವುಗೊಳಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


