ಉಡುಪಿ: ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ನೇಮಕ ಮಾಡಿ ಎಂದು ಎಐಸಿಸಿ ಆದೇಶ ಹೊರಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಕಿಶನ್ ಹೆಗ್ಡೆ ಅವರು ಉಡುಪಿ ಜಿಲ್ಲಾ ಕಾಂಗ್ರೆಸ್ನ ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ಬಳಿಕ ಆ ನೇಮಕಾತಿಯನ್ನು ತಡೆಹಿಡಿಯಲಾಗಿತ್ತು.
ಇತ್ತೀಚೆಗೆ ಎಐಸಿಸಿ ವತಿಯಿಂದ ವೀಕ್ಷಕರನ್ನು ನೇಮಿಸಿ, ‘ಸಂಘಟನ್ ಅಭಿಯಾನ್’ ಕಾರ್ಯಕ್ರಮದಡಿ ಪ್ರತಿ ಜಿಲ್ಲೆಯಲ್ಲಿ ಪಕ್ಷದ ನಾಯಕರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿತ್ತು. ಈ ಕುರಿತು ವೀಕ್ಷಕರು ವರಿಷ್ಠರಿಗೆ ವರದಿ ಸಲ್ಲಿಸಿದ್ದರು. ಇದೀಗ ವರದಿಯ ಆಧಾರದ ಮೇಲೆ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.


