ಕೊಡಗು: ಕುಶಾಲನಗರ ಸಮೀಪ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತ ಸಂಭವಿಸಿ ಚಲನಚಿತ್ರ ಹಾಗೂ ಕಿರುತೆರೆ ನಟ ಹರೀಶ್ (40) ಸಾವನ್ನಪ್ಪಿದ್ದಾರೆ. ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ಘಟನೆ ನಡೆದಿದೆ.
ನಿನ್ನೆ ಕೆಲಸ ಮುಗಿಸಿಕೊಂಡು ತಡರಾತ್ರಿ ಹರೀಶ್ ಅವರು ಕುಶಾಲನಗರದಿಂದ ತಮ್ಮ ಸ್ವಗ್ರಾಮವಾದ ಹೊಸಕೋಟೆಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಕಾರು ವೇಗವಾಗಿ ಡಿಕ್ಕಿ ಹೊಡೆದಿದೆ. ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಹರೀಶ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮೃತ ಹರೀಶ್ ಅವರು ಬಹುಮುಖ ಪ್ರತಿಭೆಯಾಗಿದ್ದರು. ಅವರು ವೃತ್ತಿಜೀವನದ ಜೊತೆಗೇ ಹಲವು ಕನ್ನಡ ಸಿನಿಮಾಗಳಲ್ಲಿ ಸಹ ಕಲಾವಿದನಾಗಿ ಮತ್ತು ಕಿರುತೆರೆಯ ಜನಪ್ರಿಯ ಧಾರಾವಾಹಿಗಳಲ್ಲಿ ನಟಿಸುವ ಮೂಲಕ ತಮ್ಮನ್ನು ಗುರುತಿಸಿಕೊಂಡಿದ್ದರು.ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


