
ಬಂಟ್ವಾಳ; ವೃದ್ಧೆಯೊಬ್ಬರ ಕೊಲೆ ಮಾಡಿ, ಚಿನ್ನಾಭರಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರ್ ಟೇಕರ್ ಸೇರಿದಂತೆ ಮೂವರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಬಂಟ್ವಾಳ ತಾಲೂಕಿನ ಅಮ್ಟಾಡಿ ನಿವಾಸಿ ಏಲ್ಮಾ ಪ್ರೆಶ್ಚಿತ್ ಬರೆಟ್ರೋ (23), ನರಿಕೊಂಬು ನಿವಾಸಿಗಳಾದ ಸತೀಶ ನಾಯಕ್ (28) ಹಾಗೂ ಚರಣ್ ಕುಮಾರ್ (31) ಶಿಕ್ಷೆಗೆ ಗುರಿಯಾದ ಆರೋಪಿಗಳು.
ಘಟನೆಯ ವಿವರ: ಬಂಟ್ವಾಳ ಅಮ್ಮುಂಜೆ ನಿವಾಸಿ ಬೆನಡಿಕ್ಟ್ ಕಾರ್ಲೋ (73) ಎಂಬ ವೃದ್ಧೆಯ ಆರೈಕೆ ನೋಡಿಕೊಳ್ಳುತ್ತಿದ್ದ ಏಲ್ಮಾ ಪ್ರೆಶ್ಚಿತ್, ವೃದ್ಧೆಯ ಬಳಿಯಿದ್ದ ಚಿನ್ನಾಭರಣಗಳನ್ನು ದೋಚುವ ಉದ್ದೇಶದಿಂದ ತನ್ನ ಸ್ನೇಹಿತ ಸತೀಶ ನಾಯಕ್ ಜೊತೆ ಸೇರಿ ಆಹಾರದಲ್ಲಿ ವಿಷ ಬೆರೆಸಿ ಕೊಲ್ಲಲು ಯತ್ನಿಸಿದ್ದಳು. ಆದರೆ ಅದು ಸಫಲವಾಗದಿದ್ದಾಗ, ಮತ್ತೊಬ್ಬ ಆರೋಪಿ ಚರಣ್ ಕುಮಾರ್ ಸಹಾಯದಿಂದ 2021 ರ ಜನವರಿ 25ರ ರಾತ್ರಿ ವೃದ್ಧೆ ಬೆನಡಿಕ್ಟ್ ಕಾರ್ಲೋ ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದರು. ಬಳಿಕ ಅವರ ಬಳಿಯಿದ್ದ ಸುಮಾರು 3 ಲಕ್ಷ ರೂ. ಮೌಲ್ಯದ 71.070 ಗ್ರಾಂ ಚಿನ್ನಾಭರಣಗಳನ್ನು ಸುಲಿಗೆ ಮಾಡಿ, ಸಾಕ್ಷಿ ನಾಶಪಡಿಸಿದ್ದರು.
ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಮ್.ಎಸ್. ಆರೋಪಿಗಳನ್ನು ವಶಕ್ಕೆ ಪಡೆದಿದ್ದರೆ, ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಲಯದ ತೀರ್ಪು: ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಮಂಗಳೂರಿನ ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಜಗದೀಶ್ ವಿ.ಎನ್. ಅವರು ಜುಲೈ 28 ರಂದು ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಮೂವರೂ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.ಸರಕಾರದ ಪರವಾಗಿ ಅಭಿಯೋಜಕಿ ಶ್ರೀಮತಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.


