ಪುತ್ತೂರು: ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಕಾರ್ತಿಕ್ ಸುವರ್ಣ ಮೇರ್ಲ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರು ದೋಷಿಗಳಿಗೆ ನ್ಯಾಯಾಲಯ ಜೀವಾವಧಿ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ 3 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ. ಪ್ರಕರಣದ ಆರೋಪಿಗಳಾದ ಕಿರಣ್ ಮತ್ತು ಪ್ರೀತೇಶ್ ಅವರಿಗೆ ವಿಧಿಸಲಾದ ದಂಡದ ಮೊತ್ತದಲ್ಲಿ ತಲಾ 2.50 ಲಕ್ಷ ರೂ.ಗಳನ್ನು ಮೃತರ ಕುಟುಂಬಕ್ಕೆ ಪರಿಹಾರವಾಗಿ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಘಟನೆಯ ವಿವರ: 2019ರ ಸೆಪ್ಟೆಂಬರ್ 3ರಂದು ಪುತ್ತೂರು ತಾಲೂಕಿನ ಸಂಪ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಗಣೇಶೋತ್ಸವದ ಪೆಂಡಾಲ್‌ನಲ್ಲಿ ಕಾರ್ತಿಕ್ ಸುವರ್ಣ ಮೇರ್ಲ ಅವರನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಲಾಗಿತ್ತು. ಈ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.
ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು, ಪ್ರತ್ಯಕ್ಷದರ್ಶಿಗಳ ಸಾಕ್ಷ್ಯಗಳು ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ (FSL) ವೈಜ್ಞಾನಿಕ ಸಾಕ್ಷ್ಯಾಧಾರಗಳನ್ನು ಪುರಸ್ಕರಿಸಿ ಆರೋಪಿಗಳು ದೋಷಿಗಳೆಂದು ತೀರ್ಮಾನಿಸಿ ಶಿಕ್ಷೆ ಪ್ರಕಟಿಸಿದೆ.


