ನವದೆಹಲಿ: ಮಾರಕ ಕೊರೊನ ರೋಗ ಹರಡುವುದನ್ನು ತಡೆಯಲು ದೇಶಾದ್ಯಂತ ಲಾಕ್‌ಡೌನ್ ವಿಧಿಸಲಾಗಿದೆ. ಇದರಿಂದಾಗಿ ಹಲವು ಕ್ಷೆತ್ರಗಳು ಅರ್ಥಿಕ ಹಿನ್ನಡೆ ಅನುಭವಿಸಿದೆ. ಈ ಕ್ಷೇತ್ರಗಳ ಉತ್ತೇಜನಕ್ಕಾಗಿ ಕೇಂದ್ರ ಸರ್ಕಾರ ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದ್ದು, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ ಮತ್ತು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಜೊತೆ ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಧಾನಿ ಅಮಿತ್ ಶಾ ಮತ್ತು ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚರ್ಚೆ ನಡೆಸಿದರು ಮತ್ತು ಪ್ರಮುಖ ಆರ್ಥಿಕ ಸಚಿವಾಲಯಗಳಾದ ಮೈಕ್ರೋ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (ಎಂಎಸ್‌ಎಂಇ) ಮಂತ್ರಿಗಳೊಂದಿಗೆ ನಂತರದ ಸಭೆಗಳನ್ನು ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಸಾಲಿನ ಜಿಎಸ್‌ಟಿ ಹಣ ಸಂಗ್ರಹಣೆ ಕುರಿತ ಮಾಹಿತಿಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದ ಕೇಂದ್ರ ಸರ್ಕಾರ ಭಾರತದ ಆರ್ಥಿಕತೆಯನ್ನು ಉತ್ತೇಜಿಸಲು ಕೈಗೊಳ್ಳಲಿರುವ ಹಲವಾರು ಉಪಕ್ರಮಗಳ ಕುರಿತು ಮೋದಿ ವಿವರವಾದ ಪ್ರಸ್ತುತಿಯನ್ನು ನೀಡಲಿದ್ದಾರೆ ಎನ್ನಲಾಗಿದೆ.
ಈ ಹಿಂದೆಯೂ ಸಹ ಕೇಂದ್ರ ಸರ್ಕಾರ ಲಾಕ್‌ಡೌನ್ ಪರಿಸ್ಥಿತಿಯನ್ನು ನಿಭಾಯಿಸುವ ಸಲುವಾಗಿ ಸುಮಾರು 1.7 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಅನ್ನು ಘೋಷಣೆ ಮಾಡಿತ್ತು. ಆದರೆ, ಲಾಕ್‌ಡೌನ್ ಅವಧಿ ಮತ್ತಷ್ಟು ವಿಸ್ತರಣೆಯಾಗಿರುವ ಕಾರಣ ಕೇಂದ್ರ ಸರ್ಕಾರ ಆರ್ಥಿಕ ಕ್ಷೇತ್ರಗಳ ಅಭಿವೃದ್ಧಿಗೆ ಮತ್ತಷ್ಟು ವಿನಾಯಿತಿ ನೀಡಲು ಮುಂದಾಗಿದೆ ಎನ್ನಲಾಗುತ್ತಿದೆ.