ಮಂಗಳೂರು; : ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಚಿಕಿತ್ಸೆ ಫಲಿಸದೇ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಿನ್ನಿಗೋಳಿ ಸಮೀಪದ ಪುನರೂರಿನ ಯುವತಿ ಶ್ರೀಲತಾ ತಂತ್ರಿ (26) ಮೃತರು.
ಭರತನಾಟ್ಯ ಹಾಗೂ ಯಕ್ಷಗಾನ ಕಲಾವಿದೆಯಾಗಿ ಮತ್ತು ಖ್ಯಾತ ನಿರೂಪಕಿಯಾಗಿಯೂ ಗುರುತಿಸಿಕೊಂಡಿದ್ದ ಶ್ರೀಲತಾ ಉದ್ಯೋಗ ನಿಮಿತ್ತ 2025ರ ನವೆಂಬರ್ ತಿಂಗಳಲ್ಲಿ ದುಬೈನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದರಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತದ ತೀವ್ರತೆಗೆ ಅವರು ಕೋಮಾ ಸ್ಥಿತಿಗೆ ತಲುಪಿದ್ದರು. ಆರಂಭದಲ್ಲಿ ಅವರಿಗೆ ದುಬೈನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.
ಆದರೆ, ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಚೇತರಿಕೆ ಕಂಡುಬರದ ಹಿನ್ನೆಲೆಯಲ್ಲಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಕೆಲವು ತಿಂಗಳುಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲೇ ಕೋಮಾದಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಅವರು, ಭಾನುವಾರ ಚಿಕಿತ್ಸೆಗೆ ಸ್ಪಂದಿಸದೆ ಇಹಲೋಕ ತ್ಯಜಿಸಿದ್ದಾರೆ. ಅವಿವಾಹಿತರಾಗಿದ್ದ ಮೃತರು ತಾಯಿ ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ.


