
ಮಂಗಳೂರು; ಟ್ಯಾಬ್ಲೆಟ್ ಆರೀಫ್ @ ಆರೀಫ್ ಹುಸೈನ್ ಕೊಲೆ ಪ್ರಕರಣದ ಮತ್ತೊರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಪಡೀಲ್ ನಿವಾಸಿ ಮೊಹಮ್ಮದ್ ಇಬ್ರಾಹಿಂ ಸಿನಾನ್ @ ಚಿನ್ನು( 21) ಬಂಧಿತ ಆರೋಪಿ. ಆರೋಪಿಯನ್ನು ದಿನಾಂಕ 25-05-2026 ರಂದು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ದಿನಾಂಕ 27-03-2026 ರಂದು ಬೆಳಗಿನ ಜಾವ, ತೊಕ್ಕೊಟ್ಟು ಪ್ಲೈಓವರ್ ಮೇಲಿಂದ ಬೈಕ್ನಲ್ಲಿ ಸಂಚರಿಸುತ್ತಿದ್ದ ಆರೀಫ್ ನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಕೆಡವಿ, ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿದ್ದರು. ಬಳಿಕ ಕೃತ್ಯಕ್ಕೆ ಬಳಸಿದ ಕಾರನ್ನು ಬಂಟ್ವಾಳ ತಾಲೂಕಿನ ಬುಡೋಳಿ ಪ್ರದೇಶದಲ್ಲಿ ಬಿಟ್ಟು ಪರಾರಿಯಾಗಿದ್ದರು. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ತನಿಖೆಯನ್ನು ಸಿಸಿಬಿ ಘಟಕಕ್ಕೆ ವರ್ಗಾಯಿಸಲಾಗಿತ್ತು.
ಆರೋಪಿಯ ವಿರುದ್ಧ 2025ನೇ ಇಸವಿಯಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣ ಹಾಗೂ 2024ನೇ ಇಸವಿಯಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ಸೇರಿದಂತೆ ಒಟ್ಟು ಎರಡು ಪ್ರಕರಣಗಳು ದಾಖಲಾಗಿವೆ. ಆರೋಪಿಯು 2026ರ ಫೆಬ್ರವರಿ ತಿಂಗಳಲ್ಲಿ ಆರೀಫ್ ಹುಸೇನ್ ಅವರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ ಸಮಯ ಹಾಜರಿದ್ದ ಬಗ್ಗೆ ಹಾಗೂ 27-03-2026 ರಂದು ನಡೆದ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಹಣಕಾಸಿನ ನೆರವು ನೀಡಿರುವುದು ತನಿಖೆಯಿಂದ ತಿಳಿದು ಬಂದಿರುತ್ತದೆ. ಈತನು ಮೃತ ರೌಡಿಶೀಟರ್ “ಟೊಪ್ಪಿ ನೌಫಾಲ್” ಎಂಬಾತನ ಸಹೋದರನಾಗಿರುತ್ತಾನೆ.
ಈ ಕೊಲೆ ಪ್ರಕರಣದಲ್ಲಿ ಈಗಾಗಲೇ ಮೊಹಮ್ಮದ್ ರಿಫಾತ್ ಆಲಿ, ಇಬ್ರಾಹಿಂ ಖಲೀಲ್, ಅಶ್ಫಕ್ @ ಜುಟ್ಟು ಅಶ್ಫಕ್, ಉಮ್ಮರ್ ಫಾರೂಕ್ ಇರ್ಫಾನ್, ಮೊಹಮ್ಮದ್ ಶಾಕೀರ್, ಮೊಹಮ್ಮದ್ ರಿಜ್ವಾನ್ @ ರಿಜ್ವಾನ್, ಮೊಹಮ್ಮದ್ ಇರ್ಷಾದ್ @ ಅಕುಡು, ಮಹಮ್ಮದ್ ಹರ್ಷಾದ್, ನಿಶಾಕ್ @ ಪುಚ್ಚೆ ನಿಶಾಕ್, ಬಿ. ಜುನೈದ್ @ ಕೊಕ್ಕಡ ಜುನೈದ್ ಹಾಗೂ ಮೊಹಮ್ಮದ್ ಸುಹೇಲ್ @ ಚಿಯಾ ಎಂಬವರನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಂಧಿತ ಆರೋಪಿಗಳೆಲ್ಲರೂ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದು, ಅವರ ವಿರುದ್ಧ “ಕೋಕಾ ಕಾಯಿದೆ” ಅಡಿಯಲ್ಲಿ ತನಿಖೆ ನಡೆಸಲಾಗುತ್ತಿದೆ.


