ಮಂಗಳೂರು; ಉಳ್ಳಾಲ ತಾಲೂಕಿನ ಸೋಮೇಶ್ವರ ಪೆರಿಬೈಲ್ ಬೀಚ್‌ನಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬರು ಸಮುದ್ರದ ಅಲೆಗೆ ಸಿಲುಕಿ ನಾಪತ್ತೆಯಾಗಿದ್ದು, ಮತ್ತೊಬ್ಬ ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶನಿವಾರ ನಡೆದಿದೆ.
ಉಜಿರೆಯ ಖಾಸಗಿ ಕಾಲೇಜಿನ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಮ್ಮರಡಿ ನಿವಾಸಿ ಶೋಭಿತ್ ಎಂ. ಗೌಡ (18) ನಾಪತ್ತೆಯಾದ ವಿದ್ಯಾರ್ಥಿ. ಮತ್ತೊಬ್ಬ ವಿದ್ಯಾರ್ಥಿ ಆಕಾಶ್ ಈಜಿ ದಡ ಸೇರಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾಲೇಜಿನ 9 ವಿದ್ಯಾರ್ಥಿಗಳು ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ, ಗೂಗಲ್ ಮ್ಯಾಪ್ ಮೂಲಕ ಸೋಮೇಶ್ವರ ಪೆರಿಬೈಲ್ ಬೀಚ್‌ಗೆ ತೆರಳಿದ್ದರು. ಈ ವೇಳೆ ಶೋಭಿತ್ ಮತ್ತು ಆಕಾಶ್ ಸಮುದ್ರಕ್ಕಿಳಿದಾಗ ಪ್ರಬಲ ಅಲೆಗೆ ಸಿಲುಕಿ ಕೊಚ್ಚಿಹೋಗಿದ್ದರು. ನಾಪತ್ತೆಯಾಗಿರುವ ಶೋಭಿತ್ ಕುಟುಂಬದ ಏಕೈಕ ಪುತ್ರನಾಗಿದ್ದಾರೆ.
ವಿಷಯ ತಿಳಿದ ತಕ್ಷಣ ಎಸ್.ಡಿ.ಆರ್.ಎಫ್, ಕರಾವಳಿ ಕಾವಲು ಪಡೆ, ಗೃಹ ರಕ್ಷಕ ದಳ ಹಾಗೂ ಉಳ್ಳಾಲ ಪೊಲೀಸರು ಸ್ಥಳಕ್ಕೆ ಧಾವಿಸಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


