ಮಂಗಳೂರು: 2015ರಲ್ಲಿ ಮಂಗಳೂರು ಸಬ್ ಜೈಲಿನಲ್ಲಿ ನಡೆದಿದ್ದ ಮಾಡೂರು ಯುಸೂಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೋಮವಾರ (ಸೆ. 28) ತೀರ್ಪು ಪ್ರಕಟಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಐವರು ಆರೋಪಿಗಳನ್ನು ದೋಷಿಗಳು ಎಂದು ಘೋಷಿಸಿದ್ದರೆ, ಉಳಿದ ಐವರನ್ನು ಖುಲಾಸೆಗೊಳಿಸಿದೆ.
ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಲಿತೇಶ್ ಪೂಜಾರಿ, ಶೋಭರಾಜ್, ಯುವರಾಜ್, ಪ್ರದೀಪ್ ಹಾಗೂ ಉಮೇಶ್ ಕೊಂಬಾರ್ ವಿರುದ್ಧ ಆರೋಪ ಸಾಬೀತಾಗಿದ್ದು, ಶಿಕ್ಷೆಯ ಪ್ರಮಾಣ ಪ್ರಕಟವಾಗುವುದು ಬಾಕಿಯಿದೆ. ಇನ್ನು ಶರಣ್ ಪೂಜಾರಿ, ಮಹೇಶ್ ಕುಮಾರ್, ಕಮಲಾಕ್ಷ ಪೂಜಾರಿ, ಲತೀಶ್ ಹಾಗೂ ಸತೀಶ್ ಪೂಜಾರಿ (ಮೃತಪಟ್ಟಿದ್ದಾರೆ) ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಪ್ರಕರಣದ ಹಿನ್ನೆಲೆ: 2015ರ ನವೆಂಬರ್ 2ರಂದು ಮಂಗಳೂರಿನ ಸಬ್ ಜೈಲಿನಲ್ಲಿ ಮಾಡೂರು ಯುಸುಫ್ ಹತ್ಯೆ ನಡೆದಿತ್ತು. ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಅಂದಿನ ಎಸಿಪಿ ತಿಲಕ್ ಚಂದ್ರ ಅವರು 2016ರಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆಯ ಬಳಿಕ ನ್ಯಾಯಾಲಯ ಈ ಮಹತ್ವದ ತೀರ್ಪು ನೀಡಿದೆ.


