
ಬೆಂಗಳೂರು: ಕೊನೆಗೂ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಇಬ್ಬರು ಸಚಿವರ ಖಾತೆಗಳನ್ನು ಬದಲಾವಣೆ ಮಾಡಲಾಗಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ.
ಆರೋಗ್ಯ ಸಚಿವ ಯು.ಟಿ. ಖಾದರ್ ಅವರಿಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಖಾತೆಯನ್ನೂ ನೀಡಲಾಗಿದೆ.

ಕೆ.ಹೆಚ್. ಮುನಿಯಪ್ಪ ಅವರಿಗೆ ಸಮಾಜ ಕಲ್ಯಾಣ ಖಾತೆ ನೀಡಲಾಗಿದ್ದು, ರಾಮಲಿಂಗಾರೆಡ್ಡಿ ಅವರಿಗೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಖಾತೆ ನೀಡಲಾಗಿದೆ.
ಸಚಿವ ರಿಜ್ವಾನ್ ಅರ್ಷದ್ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು, ಚಲುವರಾಯಸ್ವಾಮಿ ಅವರಿಗೆ ಜಲಸಂಪನ್ಮೂಲ, ಪಿ.ಎಂ. ನರೇಂದ್ರಸ್ವಾಮಿ ಅವರಿಗೆ ಕೃಷಿ ಹಾಗೂ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಅಬಕಾರಿ ಖಾತೆ ನೀಡಲಾಗಿದೆ.

ಬಂದರು ಮತ್ತು ಮೀನುಗಾರಿಕಾ ಇಲಾಖೆಯನ್ನು ಸಚಿವ ಕೆ.ಎಸ್. ಬಸವಂತಪ್ಪ ಅವರಿಗೆ, ಬಿ.ಝೆಡ್ ಜಮೀರ್ ಅಹಮದ್ ಖಾನ್ ಅವರಿಗೆ ವಸತಿ, ಲಕ್ಷ್ಮಣ ಸವದಿ ಅವರಿಗೆ ಸಹಕಾರ ಇಲಾಖೆಯ ಜವಾಬ್ದಾರಿ ವಹಿಸಲಾಗಿದೆ.


