ಬೆಂಗಳೂರು: ವಿಧಾನಸೌಧ ಬಾಂಬ್ ಸ್ಫೋಟದಿಂದ ಧ್ವಂಸಗೊಂಡಂತೆ ಎಐ ತಂತ್ರಜ್ಞಾನ ಬಳಸಿ ನಕಲಿ ವಿಡಿಯೋ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಬಿಹಾರ ಮೂಲದ ಹಜರತ್ ಅಲಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಈತ ಬೆಂಗಳೂರಿನ ಪೈಪ್ ಮಾರಾಟ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಆರೋಪಿ ತನ್ನ ‘Inx king Hg’ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸ್ಫೋಟದಂತೆ ಕಾಣುವ ವಿಡಿಯೋವನ್ನು ಹಂಚಿಕೊಂಡಿದ್ದನು. ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರಲ್ಲಿ ಆತಂಕ ಮೂಡಿತ್ತು. ಆದರೆ, ವಿಧಾನಸೌಧದಲ್ಲಿ ಯಾವುದೇ ಸ್ಫೋಟ ಸಂಭವಿಸಿಲ್ಲ. ವೈರಲ್ ವಿಡಿಯೋ ಎಐ ತಂತ್ರಜ್ಞಾನ ಬಳಸಿ ಸೃಷ್ಟಿಸಿದ ನಕಲಿ ದೃಶ್ಯವಾಗಿದೆ.
ವಿಡಿಯೋ ಗಮನಕ್ಕೆ ಬಂದ ಬಳಿಕ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಸೈಬರ್ ಕ್ರೈಂ ವಿಭಾಗದ ನೆರವಿನಿಂದ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.
ನಕಲಿ ವಿಡಿಯೋಗಳನ್ನು ಸೃಷ್ಟಿಸಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿಯನ್ನು ಪರಿಶೀಲಿಸದೆ ಹಂಚಿಕೊಳ್ಳದಂತೆ ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.


