ಹೊಸಕೋಟೆ : ರಾಜಕೀಯ ನಾಯಕರಿಗೆ ಒಬ್ಬರಾದ ಮೇಲೆ ಒಬ್ಬರಂತೆ ಕೊರೊನಾ ಪಾಸಿಟಿವ್ ಕಾಣಿಸಿಕೊಳ್ಳುತ್ತಿರೋದು ಆತಂಕಕ್ಕೆ ಕಾರಣವಾಗಿದೆ. ಇದೀಗ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಹಾಗೂ ಅವರ ಪತ್ನಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.
“ಜುಲೈ 6 ಸೋಮವಾರ ದಂದು, ನನಗೆ ಸ್ವಲ್ಪ ಮೈ ಕೈ ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ನಾನು ಮತ್ತು ನನ್ನ ಧರ್ಮಪತ್ನಿ ಶ್ರೀಮತಿ ಪ್ರತಿಭಾ ಶರತ್ ಒಳಗಾದೆವು. ಇವತ್ತು ಸಂಜೆ ಇಬ್ಬರಿಗೂ ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ನಿಮಗೆ ಕೊರೊನಾದ ಯಾವುದೇ ಲಕ್ಷಣಗಳು ಕಂಡುಬಂದಲ್ಲಿ ಆದರೂ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇವೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀವಿ.
ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇವೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ “ ಎಂದು ಶರತ್ ಬಚ್ಚೇಗೌಡ ತಿಳಿಸಿದ್ದಾರೆ.