ಸುರತ್ಕಲ್: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭಾರೀ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವಾ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಸುರತ್ಕಲ್ನ ಇಡ್ಯಾ ಗ್ರಾಮದ ಕಾನ ನಿವಾಸಿಯಾದ ರಾಜೇಶ್ ಡಿಸಿಲ್ವಾ, ಹಲವು ವರ್ಷಗಳಿಂದ MRPLನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಸ್ಫೋಟದಲ್ಲಿ ತೀವ್ರ ಸುಟ್ಟಗಾಯಗಳಿಗೆ ಒಳಗಾಗಿದ್ದ ಅವರು, ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
MRPLನ ಫೇಸ್-3ರ CHTU (Coker Hydro Treating Unit) ಘಟಕದಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಸ್ಫೋಟದಲ್ಲಿ ಹಳೆಯಂಗಡಿ ನಿವಾಸಿ ಮನೀಶ್ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವಾ ಅವರು ಇದೀಗ ಕೊನೆಯುಸಿರೆಳೆದಿದ್ದಾರೆ.
ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬ್ಯಾಪಿಸ್ಟ್ ಡಿಸಿಲ್ವಾ ಅವರ ಐವರು ಮಕ್ಕಳಲ್ಲಿ ರಾಜೇಶ್ ಒಬ್ಬರಾಗಿದ್ದು, ಇಬ್ಬರು ಗಂಡು ಮಕ್ಕಳು ಹಾಗೂ ಮೂವರು ಹೆಣ್ಣುಮಕ್ಕಳಿದ್ದಾರೆ. ರಾಜೇಶ್ ಅವಿವಾಹಿತರಾಗಿದ್ದರು ಎಂದು ತಿಳಿದುಬಂದಿದೆ.


