ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿಯಲಿದ್ದಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ನಾಯಕರು ಸೇರಿ ಈ ಸಂಬಂಧ ಅಂತಿಮ ಚರ್ಚೆಯನ್ನು ನಡೆಸಿದರು.
ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಇವತ್ತು ನಮ್ಮ ಅಭ್ಯರ್ಥಿ ಅಂತ ಘೋಷಣೆ ಮಾಡಿದ್ದೇವೆ. ಪ್ರಧಾನಿ ಮೋದಿ ಅವರ ಆಶೀರ್ವಾದವಿದೆ. ಮೋದಿ ಅವರ ಬೆಂಬಲದಿಂದ ಕುಮಾರಸ್ವಾಮಿ, ಅಶೋಕ್ ಎಲ್ಲರೂ ಒಟ್ಟಾಗಿ ಸೇರಿದ್ದೇವೆ. ನೂರಕ್ಕೆ ನೂರು ಚುನಾವಣೆಯಲ್ಲಿ ನಿಂತು ಗೆಲುವು ಸಾಧಿಸಲಿದ್ದಾರೆ ಎಂದರು.
ಇದೇ ವೇಳೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸೇರಿ, ಜೊತೆಗೆ ಕಾರ್ಯಕರ್ತರ ಸಭೆಯ ಬಳಿಕ ಅವರ ಒತ್ತಡದ ಕಾರಣದಿಂದಾಗಿ ಅಂತಿಮವಾಗಿ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ನಿಲ್ಲಿಸಲು ನಿರ್ಧರಿಸಲಾಗಿದೆ. ಅವರು ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದರು.


