ಬೆಂಗಳೂರು: ಎಸ್‌ಎಸ್‌ಎಲ್ಸಿ ಪರೀಕ್ಷೆಗೆ ಸಿದ್ಧತೆಗಳನ್ನು ಆರಂಭಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.
ಸೋಮವಾರ ರಾಜ್ಯದ ಎಲ್ಲ ಜಿಲ್ಲೆಗಳ ಶೈಕ್ಷಣಿಕ ಉಪ ನಿರ್ದೇಶಕರೊಂದಿಗೆ ಸಚಿವರು ವಿಡಿಯೋ ಸಂವಾದವನ್ನು ನಡೆಸಿದರು. ಎಲ್ಲ ಜಿಲ್ಲೆಗಳಿಂದ ಬಂದ ಒಟ್ಟಾಭಿಪ್ರಾಯದಂತೆ ಮಕ್ಕಳು ತಮ್ಮ ಪರೀಕ್ಷಾ ದಿನಾಂಕ ತಿಳಿಯಲು ಉತ್ಸುಕರಾಗಿದ್ದರು ಎಂದು ಸಚಿವರು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ತಮ್ಮ ಪರಿಶ್ರಮದ ಆಧಾರದಲ್ಲಿ ಪರೀಕ್ಷಾ ಫಲಿತಾಂಶವನ್ನು ಪಡೆಯಬೇಕೆಂದು ಬಯಸುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಕೊರೊನಾ ನಂತರದ ಸಾಮಾಜಿಕ ಸ್ಥಿತಿಗತಿಗಳಿಗೆ ಅನುಗುಣವಾಗಿ ಅವಶ್ಯಕವಿರುವ ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಪರೀಕ್ಷೆಗಳನ್ನು ನಿರ್ವಹಿಸುವ ಬಗ್ಗೆ ಕೂಡಲೇ ಗಮನ ಹರಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಮಾಸ್ಕ್, ಸ್ಯಾನಿಟೈಸರ್ ಬಳಕೆ, ಜ್ವರ ತಪಾಸಣೆ ನಡೆಸುವುದು ಕಡ್ಡಾಯವಾಗಿದೆ. ಪರೀಕ್ಷಾ ಕೇಂದ್ರಕ್ಕೆ ಬಂದ ವೇಳೆ ಮಕ್ಕಳ ಮಾಸ್ಕ್, ಸ್ಯಾನಿಟೈಸರ್ ಒದಗಿಸಿ ಥರ್ಮಲ್ ಸ್ಕ್ರೀನಿಂಗ್ ನಡೆಸಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಿದ ನಂತರ ಪರೀಕ್ಷೆಗೆ ಹಾಜರುಪಡಿಸಲು ಸೂಚಿಸಲಾಗಿದೆ. ನೆಲದ ಮೇಲೆ, ಬಯಲಿನಲ್ಲಿ ಪರೀಕ್ಷೆ ಬರೆಸದಂತೆ ಎಚ್ಚರಿಕೆ ವಹಿಸಬೇಕು. ಪರೀಕ್ಷೆ ಬರೆಯಲು ಅಗತ್ಯವಾದ ಡೆಸ್ಕ್, ಬೆಂಚುಗಳನ್ನು ವ್ಯವಸ್ಥೆ ಮಾಡಬೇಕು. ಕಂಟೇನ್ಮೆಂಟ್ ಜೋನ್ ನಲ್ಲಿರುವ ಪರೀಕ್ಷಾ ಕೇಂದ್ರ ಸುರಕ್ಷಿತ ವಲಯಗಳಿಗೆ ಸ್ಥಳಾಂತರ ಮಾಡಬೇಕು. ಉಪ ಕೇಂದ್ರಗಳನ್ನು ಸ್ಥಾಪಿಸಿ ಪರೀಕ್ಷೆ ನಡೆಸಲು ವ್ಯವಸ್ಥೆ ಕಲ್ಪಿಸಬೇಕು. 24 ಮಕ್ಕಳ ಬದಲಿಗೆ ಕಡಿಮೆ ಸಂಖ್ಯೆಯ ಮಕ್ಕಳನ್ನು ಕೂರಿಸಿ ಪರೀಕ್ಷೆ ನಡೆಸಬೇಕು. ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಸಿಸಿಟಿವಿ ವೈದ್ಯಕೀಯ ಸೌಲಭ್ಯ ಕಲ್ಪಿಸಬೇಕು. ಹೀಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ಆರಂಭಿಸಲು ಸಚಿವರು ಸೂಚನೆ ನೀಡಿದ್ದಾರೆ.