
ಚಿಕ್ಕಮಗಳೂರು: ಪರೀಕ್ಷೆಯಲ್ಲಿ ಅನುತ್ತೀರ್ಣನಾಗುವ ಭೀತಿಯಿಂದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನವೆಂಬರ್ 7ರಂದು ಕಾಲೇಜಿನ ಹಾಸ್ಟೆಲ್ನಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ನಗರದ ಹೊರವಲಯದಲ್ಲಿ ಪತ್ತೆಯಾಗಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದ ರಕ್ಷಿತ್ (19) ಮೃತ ವಿದ್ಯಾರ್ಥಿ. ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಈತ, ನಗರದ ಸರ್ಕಾರಿ ವೃತ್ತಿಪರ ಕಾಲೇಜಿನ ಬಾಲಕರ ನಿಲಯದಲ್ಲಿ ವಾಸವಾಗಿದ್ದ.
ನವೆಂಬರ್ 7ರಂದು ಹಾಸ್ಟೆಲ್ನಿಂದ ನಾಪತ್ತೆಯಾಗಿದ್ದ ರಕ್ಷಿತ್ಗಾಗಿ ಹುಡುಕಾಟ ನಡೆಸಲಾಗಿತ್ತು. ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಇದೀಗ ನಗರದ ಹೊರವಲಯದಲ್ಲಿರುವ ಜಿಲ್ಲಾ ಪಂಚಾಯತ್ ಸಮೀಪದ ನಿರ್ಜನ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಆತನ ಮೃತದೇಹ ಪತ್ತೆಯಾಗಿದೆ.
ಪರೀಕ್ಷೆಯಲ್ಲಿ ಫೇಲಾಗುತ್ತೇನೆ ಎಂಬ ಆತಂಕವನ್ನು ರಕ್ಷಿತ್ ತನ್ನ ಸ್ನೇಹಿತನ ಬಳಿ ಹೇಳಿಕೊಂಡಿದ್ದ ಎನ್ನಲಾಗಿದೆ. ಪರೀಕ್ಷೆಯ ಭಯವೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮಾಹಿತಿ ತಿಳಿದು ಚಿಕ್ಕಮಗಳೂರು ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ತನಿಖೆ ಮುಂದುವರಿದಿದೆ.


