ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಲಷ್ಕರ್-ಎ-ತೊಯ್ಬಾದ ಉನ್ನತ ಕಮಾಂಡರ್ ಫೌಜಿ ಮೂಸಾ ಹತನಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೇನೆ, ಜಮ್ಮು-ಕಾಶ್ಮೀರ ಪೊಲೀಸರು ಹಾಗೂ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಜಂಟಿಯಾಗಿ ‘ಆಪರೇಷನ್ ಕೊರಾಗ್’ ಕಾರ್ಯಾಚರಣೆ ನಡೆಸಿದ್ದು, ಯೂಸ್ಮಾರ್ಗ್ ಸಮೀಪದ ಕೊರಾಗ್ ಪ್ರದೇಶದಲ್ಲಿ ಈ ಕಾರ್ಯಾಚರಣೆ ನಡೆದಿದೆ. ನಿರ್ದಿಷ್ಟ ಗುಪ್ತಚರ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಇಲ್ಲಿ ಶೋಧ ಕಾರ್ಯ ಆರಂಭಿಸಿದ್ದವು.
ಶೋಧ ಕಾರ್ಯದ ವೇಳೆ ಅನುಮಾನಾಸ್ಪದ ಚಲನವಲನ ಕಂಡುಬಂದಿದ್ದು, ಭದ್ರತಾ ಪಡೆಗಳು ಸವಾಲು ಹಾಕಿದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ‘ಎಕ್ಸ್’ ಮೂಲಕ ಮಾಹಿತಿ ನೀಡಿದೆ.
ಹತನಾದ ಉಗ್ರನನ್ನು ಮೊಹಮ್ಮದ್ ಆಸಿಫ್ ಅಲಿಯಾಸ್ ಹಾಶಿಮ್ ಮೂಸಾ ಎಂದು ಗುರುತಿಸಲಾಗಿದೆ. ಜಮ್ಮು-ಕಾಶ್ಮೀರದಲ್ಲಿ ನಡೆದ ಹಲವು ದಾಳಿಗಳಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಆತ ಭದ್ರತಾ ಪಡೆಗಳಿಗೆ ಬೇಕಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


