ಉಳ್ಳಾಲ: ತೊಕ್ಕೊಟ್ಟು ರಿಕ್ಷಾ ಪಾರ್ಕ್ ಬಳಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪಾದಚಾರಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾಪಿಕಾಡು ನಿವಾಸಿ ಹಾಗೂ ಪಂಚಮ್ ಕೇಟರರ್ಸ್ ಮಾಲಕರಾದ ಚಂದ್ರಶೇಖರ್ (62) ಗಾಯಗೊಂಡ ವ್ಯಕ್ತಿಯಾಗಿದ್ದು, ತೊಕ್ಕೊಟ್ಟುವಿನ ನಂದಿನಿ ಪಾರ್ಲರ್ನಲ್ಲಿ ಹಾಲು ಖರೀದಿಸಿ ರಸ್ತೆ ದಾಟುತ್ತಿದ್ದಾಗ ಈ ದುರಂತ ಸಂಭವಿಸಿದೆ. ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಅತಿ ವೇಗದಲ್ಲಿ ಧಾವಿಸುತ್ತಿದ್ದ ಆಟೋ ರಿಕ್ಷಾವೊಂದು ಅವರಿಗೆ ನೇರವಾಗಿ ಢಿಕ್ಕಿ ಹೊಡೆದು ಪಲ್ಟಿಯಾಗಿದೆ.
ಢಿಕ್ಕಿಯ ರಭಸಕ್ಕೆ ಚಂದ್ರಶೇಖರ್ ಅವರ ಹಣೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದು, ತಕ್ಷಣವೇ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯಲ್ಲಿ ರಿಕ್ಷಾ ಚಾಲಕ ಪ್ರಶಾಂತ್ ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ವಿಷಯ ತಿಳಿದ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


