
ಬಂಟ್ವಾಳ: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 2 ವರ್ಷ 6 ತಿಂಗಳು ಸಶ್ರಮ ಜೈಲು ಶಿಕ್ಷೆ ಹಾಗೂ 40,000 ರೂಪಾಯಿ ದಂಡ ವಿಧಿಸಿ ಮಂಗಳೂರಿನ ಎಫ್‌ಟಿಎಸ್‍ಸಿ-1 (FTSC-I) ನ್ಯಾಯಾಲಯದ ನ್ಯಾಯಾಧೀಶರಾದ ಮೋಹನ್ ಜೆ.ಎಸ್ ಅವರು ತೀರ್ಪು ನೀಡಿದ್ದಾರೆ. ಮಣಿನಾಲ್ಕೂರು ನಿವಾಸಿ ಮೋನಪ್ಪ ನಾಯ್ಕ (52) ಶಿಕ್ಷೆಗೆ ಗುರಿಯಾದ ಆರೋಪಿ.
ಘಟನೆಯ ವಿವರ:
ದಿನಾಂಕ 23.06.2025 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನಡೆದ ಬಗ್ಗೆ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಅಂದಿನ ಪಿಎಸ್‌ಐ ಕೀರಪ್ಪ ಘಟಕಾಂಬಳೆ ಹಾಗೂ ಪಿಎಸ್‌ಐ ಕೃಷ್ಣಕಾಂತ ಪಾಟೀಲ್ ಅವರು ಸೂಕ್ತ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದರು.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು, ಜುಲೈ 31 ರಂದು ಆರೋಪಿಯ ಮೇಲಿನ ಅಪರಾಧ ಸಾಬೀತಾಗಿದೆ ಎಂದು ತೀರ್ಪು ನೀಡಿದೆ. ಬಿಎನ್‌ಎಸ್ (BNS) ಹಾಗೂ ಪೋಕ್ಸೋ (POCSO) ಕಾಯ್ದೆಯಡಿ ವಿಧಿಸಲಾದ ಶಿಕ್ಷೆಗಳು ಏಕಕಾಲದಲ್ಲಿ (Concurrently) ಅನುಭವಿಸಬೇಕಾಗಿರುವುದರಿಂದ ಆರೋಪಿಗೆ ಗರಿಷ್ಠ 2 ವರ್ಷ 6 ತಿಂಗಳು ಜೈಲು ಶಿಕ್ಷೆಯಾಗಲಿದೆ. ದಂಡದ ಮೊತ್ತ 40,000 ರೂ. ಪಾವತಿಸಲು ಆದೇಶಿಸಲಾಗಿದೆ.ಸರ್ಕಾರದ ಪರವಾಗಿ ಅಭಿಯೋಜಕಿ ಸಹನಾದೇವಿ ಅವರು ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರು.


