ಮಂಗಳೂರು: ಪೊಲೀಸ್ ಹುತಾತ್ಮರ ದಿನವನ್ನು ಆಚರಿಸುವುದಷ್ಟೇ ಸಾಕಾಗುವುದಿಲ್ಲ. ಕರ್ತವ್ಯದ ವೇಳೆ ಪ್ರಾಣತ್ಯಾಗ ಮಾಡಿದ ಸಿಬ್ಬಂದಿಯ ಕುಟುಂಬದ ಸದಸ್ಯರ ಅಗತ್ಯಗಳನ್ನು ಪೂರೈಸಿ, ಅವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜಗದೀಶ್ ವಿ.ಎನ್. ಹೇಳಿದರು.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ನ 7ನೇ ಪಡೆ ಹಾಗೂ ಮಂಗಳೂರು ವಿಶೇಷ ಕಾರ್ಯಪಡೆ ಘಟಕಗಳ ಸಹಯೋಗದಲ್ಲಿ ಬುಧವಾರ ನಗರದಲ್ಲಿ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, 1960ರಿಂದ ಪ್ರತಿ ವರ್ಷ ಅಕ್ಟೋಬರ್ 21ರಂದು ಪೊಲೀಸ್ ಹುತಾತ್ಮರ ದಿನವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಪಶ್ಚಿಮ ವಲಯದ ಉಪ ಪೊಲೀಸ್ ಮಹಾನಿರೀಕ್ಷಕ ಚೇತನ್ ಆರ್., ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ಹಾಗೂ ಜಿಲ್ಲಾ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ವರಿಷ್ಠಾಧಿಕಾರಿ ಸಿ.ಎ. ಸೈಮನ್ ಸೇರಿದಂತೆ ಹಲವು ಗಣ್ಯರು ಹುತಾತ್ಮರಿಗೆ ನಮನ ಸಲ್ಲಿಸಿದರು.
2025-26ನೇ ಸಾಲಿನಲ್ಲಿ ಕರ್ತವ್ಯದ ವೇಳೆ ಹುತಾತ್ಮರಾದ 154 ಪೊಲೀಸ್ ಸಿಬ್ಬಂದಿಯ ಹೆಸರುಗಳನ್ನು ಡಿಸಿಪಿ ಸ್ಯಾಮ್ ವರ್ಗೀಸ್ ವಾಚಿಸಿದರು. ಬಳಿಕ ಹುತಾತ್ಮರ ಗೌರವಾರ್ಥ ಮೂರು ಸುತ್ತು ಗುಂಡು ಹಾರಿಸಲಾಯಿತು. ಪೊಲೀಸ್ ಧ್ವಜವನ್ನು ಅರ್ಧಕ್ಕೆ ಹಾರಿಸಿ, ಎರಡು ನಿಮಿಷಗಳ ಮೌನಾಚರಣೆ ಮೂಲಕ ವೀರಮರಣ ಹೊಂದಿದ ಸಿಬ್ಬಂದಿಗೆ ಗೌರವ ಸಲ್ಲಿಸಲಾಯಿತು.


