Monday, November 2, 2026
Homeಕರಾವಳಿಉಡುಪಿಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ; ನಿಷ್ಪಕ್ಷಪಾತ ತನಿಖೆಗೆ ಬಿಲ್ಲವ ಯುವ ವೇದಿಕೆ ಆಗ್ರಹ; ನಿರ್ಲಕ್ಷ್ಯ ಮಾಡಿದರೆ...

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ; ನಿಷ್ಪಕ್ಷಪಾತ ತನಿಖೆಗೆ ಬಿಲ್ಲವ ಯುವ ವೇದಿಕೆ ಆಗ್ರಹ; ನಿರ್ಲಕ್ಷ್ಯ ಮಾಡಿದರೆ ಜಿಲ್ಲೆಯಾದ್ಯಂತ ಪ್ರತಿಭಟನೆಯ ಎಚ್ಚರಿಕೆ

- Advertisement -
- Advertisement -

ಉಡುಪಿ: ಪೆರ್ಡೂರು ನಿವಾಸಿ ಪ್ರದೀಪ್ ಪೂಜಾರಿ ಅವರು ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತರಿಗೆ ನ್ಯಾಯ ಒದಗಿಸುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಆಗ್ರಹಿಸಿದೆ.

ಈ ಕುರಿತು ಜಿಲ್ಲಾ ಬಿಲ್ಲವ ಯುವ ವೇದಿಕೆಯ ಜಿಲ್ಲಾಧ್ಯಕ್ಷ ಪ್ರವೀಣ್ ಎಂ. ಪೂಜಾರಿ ಅವರ ನೇತೃತ್ವದಲ್ಲಿ ಬನ್ನಂಜೆಯ ನಾರಾಯಣ ಗುರು ಸಭಾಭವನದಲ್ಲಿ ವಿಶೇಷ ಸಭೆ ನಡೆಯಿತು. ಸಭೆಯಲ್ಲಿ ಬಿಲ್ಲವ ಸಮುದಾಯದ ಮುಖಂಡರು ಹಾಗೂ ಮೃತ ಪ್ರದೀಪ್ ಪೂಜಾರಿ ಅವರ ಕುಟುಂಬಸ್ಥರು ಭಾಗವಹಿಸಿ ಪ್ರಕರಣದ ಕುರಿತು ಚರ್ಚಿಸಿದರು.

ಸಭೆಯ ಬಳಿಕ ವೇದಿಕೆಯ ನಿಯೋಗವು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಪ್ರಕರಣದ ಕುರಿತು ನಿಷ್ಪಕ್ಷಪಾತ ಮತ್ತು ಸಮಗ್ರ ತನಿಖೆ ನಡೆಸುವುದರ ಜತೆಗೆ, ಆರೋಪಿಗಳನ್ನು ಶೀಘ್ರ ಬಂಧಿಸಬೇಕು. ತನಿಖೆಯ ವೇಗ ಹೆಚ್ಚಿಸಲು ವಿಶೇಷ ಪೊಲೀಸ್ ತಂಡವನ್ನು ರಚಿಸಬೇಕು ಎಂದು ಒತ್ತಾಯಿಸಿತು.

ಇದಲ್ಲದೆ, ಪ್ರಕರಣದಲ್ಲಿ ಪೊಲೀಸ್ ಕರ್ತವ್ಯ ಲೋಪವಾಗಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಸಬೇಕು. ಸಂತ್ರಸ್ತರ ದೂರನ್ನು ಸ್ವೀಕರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಠಾಣಾಧಿಕಾರಿ ಹಾಗೂ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿ, ಕರ್ತವ್ಯ ನಿರ್ಲಕ್ಷ್ಯ ತೋರಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ಮುಂದುವರಿದರೆ ಜಿಲ್ಲೆಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಲ್ಲವ ಯುವ ವೇದಿಕೆ ಎಚ್ಚರಿಕೆ ನೀಡಿದೆ.

ಇದೇ ವೇಳೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರನ್ನು ಭೇಟಿಯಾದ ನಿಯೋಗವು ಪ್ರಕರಣದ ಕುರಿತು ಮನವಿ ಸಲ್ಲಿಸಿತು. ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಸಚಿವರು ನೀಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!