Thursday, May 2, 2024
Homeಪ್ರಮುಖ-ಸುದ್ದಿಪಿಎಸ್ ಐ ಕಿರಣ್ ಕುಮಾರ್ ಆತ್ಮಹತ್ಯೆ ಪ್ರಕರಣದ ಉನ್ನತಮಟ್ಟದ ತನಿಖೆ ನಡೆಸಿ, ಸರ್ಕಾರಕ್ಕೆ ಹೆಚ್ಡಿಕೆ ಆಗ್ರಹ

ಪಿಎಸ್ ಐ ಕಿರಣ್ ಕುಮಾರ್ ಆತ್ಮಹತ್ಯೆ ಪ್ರಕರಣದ ಉನ್ನತಮಟ್ಟದ ತನಿಖೆ ನಡೆಸಿ, ಸರ್ಕಾರಕ್ಕೆ ಹೆಚ್ಡಿಕೆ ಆಗ್ರಹ

spot_img
- Advertisement -
- Advertisement -

ಹಾಸನ : ಚನ್ನರಾಯಪಟ್ಟಣ ಪಿ.ಎಸ್.ಐ ಕಿರಣ್ ಕುಮಾರ್ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಉನ್ನತಮಟ್ಟದ ತನಿಖೆಗೆ ಒಳಪಡಿಸುವಂತೆ ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ವಿಚಾರ ಸಂಬಂಧ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಪೊಲೀಸರಿಗೂ ರಕ್ಷಣೆ ಸಿಗುವಂತಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಪೊಲೀಸ್ ಸಾವಿನ ಬಗ್ಗೆ ವಿಷಾಧ ವ್ಯಕ್ತಪಡಿಸಿರುವ ಹೆಚ್ ಡಿಕೆ ಪೊಲೀಸರು ಮತ್ತು ಹಿರಿಯ ಪೊಲೀಸ್ ಸಿಬ್ಬಂದಿ ಜೀವದ ಹಂಗು ತೊರೆದು ಹೋರಾಟ ಮಾಡುವ ಪರಿಸ್ಥಿತಿಯಲ್ಲಿ ಅವರ ಆತ್ಮಾಭಿಮಾನ, ಸ್ವಾಭಿಮಾನಕ್ಕೆ ಧಕ್ಕೆ ತರುವಂತೆ ಹಿರಿಯ ಅಧಿಕಾರಿಗಳು ನಡೆದುಕೊಳ್ಳಬಾರದು. ಕಿರಣ್ ಕುಮಾರ್ ಆತ್ಮಹತ್ಯೆಯಲ್ಲೂ ಮೇಲಾಧಿಕಾರಿಗಳ ಕಿರುಕುಳ ಕಾರಣ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಇದು ಬೇಸರದ ವಿಚಾರ ಎಂದು ಹೇಳಿಕೊಂಡಿದ್ದಾರೆ.

ಇಂತಹ ಘಟನೆಗಳು ಆಗಾಗ ನಡೆಯುವುದು ಅವಮಾನಕರ ಹೀಗಾಗಿ ಈ ವಿಚಾರದಲ್ಲಿ ಸೂಕ್ತ ತನಿಖೆಗೆ ಆದೇಶಿಸುವ ಮೂಲಕ ಕಿರಿಯ ಹಂತದ ಪೊಲೀಸ್ ಅಧಿಕಾರಿಗಳಲ್ಲಿ ನೈತಿಕ, ಸ್ಥೈರ್ಯ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕು ಅಂತ ಕುಮಾರಸ್ವಾಮಿ ಹೇಳಿದ್ದಾರೆ. ಹಿಂದೆ ಗಣಪತಿ ಭಟ್, ಮಲ್ಲಿಕಾರ್ಜುನ ಬಂಡೆ, ಕಲ್ಲಪ್ಪ ಹಂಡಿಬಾಗ್ ಅವರ ಅಕಾಲಿಕ ಸಾವು ಮತ್ತು ಅನುಪಮಾ ಶೆಣೈ ಅವರ ರಾಜೀನಾಮೆ ವೇಳೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯದಾದ್ಯಂತ “ಜಾಗಟೆ” ಬಾರಿಸಿದ್ದ ಬಿಜೆಪಿ ಈಗ ಮೌನಕ್ಕೆ ಶರಣಾಗಿದೆ ಎಂದು ಕುಮಾರಸ್ವಾಮಿ ಬಿಜೆಪಿಯನ್ನು ಕುಟುಕಿದರು.

ಆತ್ಮಹತ್ಯೆ ಮಾಡಿಕೊಂಡ ಕಿರಣ್ ಕುಮಾರ್ ಅವರ ಮೊಬೈಲ್ ಫೋನನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಜಪ್ತಿ ಮಾಡಿದ್ದು ಹಲವು ಶಂಕೆಗಳಿಗೆ ಎಡೆಮಾಡಿಕೊಟ್ಟಿದೆ. ಇವರ ಸಾವಿಗೆ ಆಯಕಟ್ಟಿನ ಜಾಗದಲ್ಲಿ ಕುಳಿತ ಹಿರಿಯ ಪೊಲೀಸ್ ಅಧಿಕಾರಿಗಳ ದೌರ್ಜನ್ಯ ಹಾಗೂ ಬೆದರಿಕೆ ತಂತ್ರ ಕಾರಣ ಎಂಬ ಮಾಹಿತಿ ನನಗಿದೆ. ಬೇರೆ ಪಕ್ಷಗಳ ಆಡಳಿತಾವಧಿಯಲ್ಲಿ ಅಧಿಕಾರಿಗಳ ನಿಗೂಢ ಸಾವಿಗೆ ಸರ್ಕಾರವೇ ಕಾರಣ ಎಂದು ಬೊಬ್ಬೆ ಹಾಕಿದ್ದ ಬಿಜೆಪಿ ವರ್ಷದಿಂದ ಆಡಳಿತ ಚುಕ್ಕಾಣಿ ಹಿಡಿದಿದೆ. ಈಗ ಪಿ.ಎಸ್.ಐ, ಇದಕ್ಕೂ ಮುನ್ನ ಐಎಎಸ್ ಅಧಿಕಾರಿ, ಕಳೆದ ವರ್ಷ ಐ.ಎಫ್.ಎಸ್. ಅಧಿಕಾರಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಸರ್ಕಾರ ದಿವ್ಯ ಮೌನಕ್ಕೆ ಶರಣಾಗಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದೆ ಪೊಲೀಸ್ ಅಧಿಕಾರಿಗಳು ಆತ್ಮಹತ್ಯೆಗೆ ಶರಣಾದಾಗ ನ್ಯಾಯಸಮ್ಮತ ತನಿಖೆಗೆ ಒತ್ತಡ ಹೇರುತ್ತಿದ್ದ ಬಿಜೆಪಿ ಈ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ತಕ್ಷಣ ಆದೇಶ ನೀಡಬೇಕು. ಯಾವುದೇ ಇಲಾಖೆಯಲ್ಲಿಯೂ ಪ್ರಾಮಾಣಿಕ ಅಧಿಕಾರಿಗಳು ಕಿರುಕುಳಕ್ಕೆ ಒಳಗಾಗದಂತೆ ಎಚ್ಚರವಹಿಸಬೇಕು ಅಂತ ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

- Advertisement -
spot_img

Latest News

error: Content is protected !!