ಪುತ್ತೂರು : ನ್ಯಾಯಾಲಯದ ಕಲಾಪ ನಡೆಯುತ್ತಿದ್ದಾಗ ಏಕಾಏಕಿ ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ ಪುತ್ತೂರು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯ ಸೋಮವಾರ 2 ವರ್ಷಗಳ ಸಾದಾ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಪುತ್ತೂರು ಸಿರಿಬಾಗಿಲು ನಿವಾಸಿ ಜಯೇಶ್ ಯಾನೆ ಜಯೇಶ್ ಕಾಂತ್ ಎಸ್. ಯಾನೆ ಶಾಕಿರ್ ಶಿಕ್ಷೆಗೆ ಗುರಿಯಾದ ಆರೋಪಿ.
ಉಪ್ಪಿನಂಗಡಿ ಠಾಣೆ ವ್ಯಾಪ್ತಿಯ ಪ್ರಕರಣವೊಂದರಲ್ಲಿ ಬಂಧಿತನಾಗಿದ್ದ ಈತನನ್ನು 2016ರ ಏಪ್ರಿಲ್ 5ರಂದು ಮಂಗಳೂರು ಜೈಲಿನಿಂದ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ವಿಚಾರಣೆಗೆ ತರಲಾಗಿತ್ತು. ಈ ವೇಳೆ ಕಲಾಪ ನಡೆಯುತ್ತಿರುವಾಗಲೇ ಈತ ಪರಾರಿಯಾಗಲು ಯತ್ನಿಸಿದ್ದನು. ಈ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಪಿಎಸ್‌ಐ ಖಾದರ್ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಪ್ರಕೃತಿ ಕಲ್ಯಾಣಪುರ ಅವರು ಆರೋಪಿಗೆ ಶಿಕ್ಷೆ ವಿಧಿಸಿದ್ದು, ಸರ್ಕಾರದ ಪರ ಕಾನೂನು ಅಭಿಯೋಜಕ ಮನೋಜ್ ಕುಮಾರ್ ವಾದ ಮಂಡಿಸಿದ್ದರು.


