ಬೆಂಗಳೂರು: ರಾಜ್ಯಸಭಾ ಚುನಾವಣೆಯ ನಾಲ್ಕು ಸ್ಥಾನಗಳಿಗೆ ಸಲ್ಲಿಸಲ್ಪಟ್ಟಿದ್ದ ನಾಲ್ಕು ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.
ವಿಧಾನಸೌಧದಲ್ಲಿ ಇಂದು ಚುನಾವಣಾಧಿಕಾರಿ ಕಚೇರಿಯಲ್ಲಿ ನಡೆದ ನಾಮಪತ್ರ ಪರಿಶೀಲನೆಯಲ್ಲಿ ಕಾಂಗ್ರೆಸ್ ಪಕ್ಷದ ಮೂವರು ಮತ್ತು ಬಿಜೆಪಿಯ ಒಬ್ಬ ಅಭ್ಯರ್ಥಿಯ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾಧಿಕಾರಿಯಾಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಘೋಷಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಎಐಸಿಸಿ ರಾಷ್ಟ್ರೀಯ ವಕ್ತಾರ ಪವನ್ ಖೇರಾ ಮತ್ತು ಮಾಜಿ ರಾಜ್ಯಸಭೆ ಉಪಸಭಾಪತಿ ರೆಹಮಾನ್ ಖಾನ್ ಪುತ್ರ ಮನ್ಸೂರ್ ಆಲಿ ಖಾನ್ ನಾಮಪತ್ರ ಸಲ್ಲಿಸಿದ್ದು, ಬಿಜೆಪಿ ಅಭ್ಯರ್ಥಿಯಾಗಿ ಪ್ರೊ. ಎಂ.ನಾಗರಾಜ್ ಕಣದಲ್ಲಿದ್ದಾರೆ.
ನಾಲ್ಕೂ ಅಭ್ಯರ್ಥಿಗಳ ಅವಿರೋಧ ಆಯ್ಕೆ ಖಚಿತವಾಗಿದ್ದು, ಜೂನ್ 11 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಹೀಗಾಗಿ ಗುರುವಾರ ನಾಲ್ವರು ಅಭ್ಯರ್ಥಿಗಳ ಅವಿರೋಧ ಆಯ್ಕೆ ಅಧಿಕೃತವಾಗಿ ಘೋಷಣೆಯಾಗಲಿದೆ.ಇದೇ ವೇಳೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಭೋಜಣ್ಣ ಸೋಮಯ್ಯ ಅವರ ನಾಮಪತ್ರ ತಿರಸ್ಕೃತವಾಗಿದೆ.


