ಬೆಳ್ತಂಗಡಿಯ ಧರ್ಮಸ್ಥಳ ಗ್ರಾಮದ ಪಾಂಗಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಹೊಸ ಆಶಾಕಿರಣ ಮೂಡಿದೆ. ಪ್ರಕರಣ ನಡೆದು ದಶಕ ಕಳೆದಿದ್ದರೂ, ನೈಜ ಅಪರಾಧಿಗಳಿಗೆ ಶಿಕ್ಷೆಯಾಗಿಲ್ಲ ಎಂಬ ಹೋರಾಟದ ನಡುವೆ ಸುಪ್ರೀಂ ಕೋರ್ಟ್ ಈ ಪ್ರಕರಣದ ತನಿಖಾ ವರದಿಯನ್ನು ಸಲ್ಲಿಸುವಂತೆ ಸಿಬಿಐಗೆ ಸೂಚನೆ ನೀಡಿದೆ.
ಪ್ರಕರಣದ ಹಿನ್ನೆಲೆ: : 2012ರ ಅಕ್ಟೋಬರ್‌ನಲ್ಲಿ ಉಜಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ನಾಪತ್ತೆಯಾಗಿದ್ದರು. ಮರುದಿನ ಅರಣ್ಯ ಪ್ರದೇಶದಲ್ಲಿ ಆಕೆಯ ಮೃತದೇಹ ಪತ್ತೆಯಾಗಿತ್ತು. ಇನ್ನು ಪ್ರಾಥಮಿಕ ತನಿಖೆಯ ಭಾಗವಾಗಿ ಮೊದಲು ಬೆಳ್ತಂಗಡಿ ಪೊಲೀಸರು ತನಿಖೆ ನಡೆಸಿದ್ದರು, ನಂತರ ಪ್ರಕರಣವು ಸಿಬಿಐಗೆ ಹಸ್ತಾಂತರವಾಯಿತು. ಮುಖ್ಯವಾಗಿ ಈ ಪ್ರಕರಣದಲ್ಲಿ ಸಂತೋಷ್ ರಾವ್ ಎಂಬಾತನನ್ನು ಬಂಧಿಸಲಾಗಿದ್ದು, ನಂತರದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯವು ಆತನನ್ನು ನಿರ್ದೋಷಿ ಎಂದು ಬಿಡುಗಡೆ ಮಾಡಿತ್ತು.
ಇನ್ನು ಕೆಳ ನ್ಯಾಯಾಲಯವು ತೀರ್ಪು ನೀಡುವಾಗ, ತನಿಖಾ ಸಂಸ್ಥೆಗಳು ನೈಜ ಅಪರಾಧಿಗಳನ್ನು ಪತ್ತೆ ಹಚ್ಚುವಲ್ಲಿ ವಿಫಲವಾಗಿವೆ ಮತ್ತು ತನಿಖೆಯಲ್ಲಿ ಲೋಪದೋಷಗಳಿವೆ ಎಂದು ಅಭಿಪ್ರಾಯಪಟ್ಟಿತ್ತು. ಇದನ್ನೇ ಆಧಾರವಾಗಿಟ್ಟುಕೊಂಡು ಸೌಜನ್ಯ ಅವರ ತಾಯಿ ಕುಸುಮಾವತಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ನ್ಯಾಯಾಲಯವು ಸೌಜನ್ಯ ಕುಟುಂಬದ ಅರ್ಜಿಯನ್ನು ವಿಚಾರಣೆ ನಡೆಸಿ, ಪ್ರಕರಣದ ಕುರಿತು ಇದುವರೆಗಿನ ತನಿಖಾ ವರದಿಯನ್ನು ಸಲ್ಲಿಸಲು ಸೂಚಿಸಿದೆ. ಅಲ್ಲದೆ, ಈ ಸಂಬಂಧ ತನಿಖಾ ಸಂಸ್ಥೆಯಾದ ಸಿಬಿಐಗೆ ನೋಟಿಸ್ ಜಾರಿ ಮಾಡಿದ್ದು, ಪ್ರಕರಣಕ್ಕೆ ಈಗ ಮಹತ್ವದ ತಿರುವು ಸಿಕ್ಕಿದೆ.


