
ಬಂಟ್ವಾಳ: ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯ ಸಂಚಾಲಕರು, ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಜಯಾನಂದ ಪೆರಾಜೆ ಅವರು 2026ನೇ ಸಾಲಿನ ಪ್ರತಿಷ್ಠಿತ ‘ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ರಾಷ್ಟ್ರ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ.
ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ಸಮಿತಿಯ ಅಧ್ಯಕ್ಷರಾದ ಡಾ. ಕೆ.ಎನ್. ವೆಂಕಟರಮಣ ಹೊಳ್ಳ ಮತ್ತು ಕಾಸರಗೋಡು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ ರಾವ್ ಬೇಕಲ್ ಅವರು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ.
ಜಯಾನಂದ ಪೆರಾಜೆ ಅವರು ಕಳೆದ 40 ವರ್ಷಗಳಿಂದ ಕನ್ನಡ ಭಾಷಾ ಶಿಕ್ಷಕರಾಗಿ ಹಾಗೂ ಉಪನ್ಯಾಸಕರಾಗಿ ಮೌಲ್ಯಯುತ ಸೇವೆ ಸಲ್ಲಿಸಿದ್ದಾರೆ. ಇದರ ಜೊತೆಗೆ, ಪ್ರಮುಖ ಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಜಾಗೃತಿ ಮೂಡಿಸುವ ಅನೇಕ ಲೇಖನಗಳನ್ನು ಬರೆಯುವ ಮೂಲಕ ನಾಡಿನಾದ್ಯಂತ ಚಿರಪರಿಚಿತರಾಗಿದ್ದಾರೆ. ಶಿಕ್ಷಣ, ಸಾಹಿತ್ಯ ಮತ್ತು ಪತ್ರಿಕೋದ್ಯಮ ರಂಗದಲ್ಲಿ ಅವರ ಬಹುಮುಖಿ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಆಯ್ಕೆ ಸಮಿತಿ ತಿಳಿಸಿದೆ.
ಕಾಸರಗೋಡಿನ ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ದಿವ್ಯ ಸಾನ್ನಿಧ್ಯದಲ್ಲಿ, ಜುಲೈ 26 ರಂದು ಜಯಾನಂದ ಪೆರಾಜೆ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಗುವುದು.


