ಮೈಸೂರು: ಖ್ಯಾತ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರು ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ರುದ್ರಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಪಂಚಭೂತಗಳಲ್ಲಿ ಲೀನರಾಗಿದ್ದಾರೆ.
ಮೊದಲಿಗೆ ಎಸ್.ಎಲ್.ಭೈರಪ್ಪ ಅವರಿಗೆ ರಾಷ್ಟ್ರಗೀತೆಯೊಂದಿಗೆ ರಾಷ್ಟ್ರಧ್ವಜ ಹೊದಿಸಿ ಸರ್ಕಾರಿ ಗೌರವವನ್ನ ಸಲ್ಲಿಕೆ ಮಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಗಣ್ಯರು ಗೌರವ ಸಮರ್ಪಣೆ ಮಾಡಿದ್ದು, ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಪೊಲೀಸರಿಂದ ಗೌರವ ಸಲ್ಲಿಕೆ ಮಾಡಲಾಯಿತು. ನಂತರದಲ್ಲಿ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ರುದ್ರಭೂಮಿಯಲ್ಲಿ ಚಂದ್ರಶೇಖರ ಶಾಸ್ತ್ರೀ ನೇತೃತ್ವದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನೆರವೇರಿದವು.
ಭೈರಪ್ಪ ಅವರ ಪಾರ್ಥಿವ ಶರೀರಕ್ಕೆ ಪುತ್ರರಾದ ರವಿಶಂಕರ್, ಉದಯ್ ಶಂಕರ್ ಮತ್ತು ಸಹನಾ ವಿಜಯ್ ಕುಮಾರ್ ಅವರು ಅಗ್ನಿಸ್ಪರ್ಶ ಮಾಡಿದರು.
ಅಂತ್ಯಸಂಸ್ಕಾರದ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಶಾಸಕ ಟಿ.ಎಸ್.ಶ್ರೀವತ್ಸ, ಎಲ್.ನಾಗೇಂದ್ರ, ಮಾಜಿ ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಸೇರಿದಂತೆ ಎಸ್.ಎಲ್.ಭೈರಪ್ಪ ಅವರ ಕುಟುಂಬಸ್ಥರು ಭಾಗಿಯಾಗಿದ್ದರು.


