
ಮಂಗಳೂರು: ಮೀನುಗಾರ ಸಮುದಾಯದ ಸೋಮನಾಥ ಪುತ್ರನ್ ಅವರ ಆತ್ಮಹತ್ಯೆಗೆ ಸುರತ್ಕಲ್ ಪೊಲೀಸರ ದೌರ್ಜನ್ಯವೇ ಕಾರಣ ಎಂದು ದಕ್ಷಿಣ ಕನ್ನಡ ಮೊಗವೀರ ಸಂಯುಕ್ತ ಸಭಾ ಆರೋಪಿಸಿದೆ. ಘಟನೆಗೆ ಸಂಬಂಧಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ, ಅವರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದೆ.
ಸೋಮವಾರ ಮಂಗಳೂರು ಉರ್ವಾ ಮಾರಿಗುಡಿ ದೇವಸ್ಥಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಭಾದ ಅಧ್ಯಕ್ಷ ಭರತ್ ಉಳ್ಳಾಲ್, ಸೋಮನಾಥ್ ಅವರು ಕುಟುಂಬದ ಏಕೈಕ ದುಡಿಯುವ ವ್ಯಕ್ತಿಯಾಗಿದ್ದರು. ಅವರಿಗೆ ಯಾವುದೇ ಅಪರಾಧ ಹಿನ್ನೆಲೆ ಇರಲಿಲ್ಲ. ಈ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಮಾನವ ಹಕ್ಕುಗಳ ಆಯೋಗಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.
ಮೃತರ ಪತ್ನಿ ದೂರು ನೀಡಿದ್ದರೂ ಆರೋಪಿಗಳನ್ನು ಈವರೆಗೆ ಬಂಧಿಸಿಲ್ಲ. ಅಲ್ಲದೆ, ಎಫ್ಐಆರ್ನಲ್ಲಿ ಆರೋಪಿಗಳ ಹೆಸರು ನಮೂದಿಸದಿರುವುದು ಅನುಮಾನಕ್ಕೆ ಕಾರಣವಾಗಿದೆ. ಆರೋಪಿಗಳನ್ನು 48 ಗಂಟೆಯೊಳಗೆ ಬಂಧಿಸಬೇಕು. ಹಾಲಿ ಅಥವಾ ನಿವೃತ್ತ ಜಿಲ್ಲಾ ನ್ಯಾಯಾಧೀಶರಿಂದ ತನಿಖೆ ನಡೆಸಿ, 30 ದಿನಗಳಲ್ಲಿ ವರದಿ ಪ್ರಕಟಿಸಬೇಕು ಎಂದು ಆಗ್ರಹಿಸಿದರು.
ಪೊಲೀಸ್ ಠಾಣೆಯ ಸಿಸಿಟಿವಿ ದೃಶ್ಯಗಳು ಹಾಗೂ ಸಂಬಂಧಿತ ದಾಖಲೆಗಳನ್ನು ವಶಪಡಿಸಿಕೊಳ್ಳಬೇಕು. ಮೃತರ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ ನೀಡಬೇಕು. ಅವರ ಪತ್ನಿಗೆ ಸರ್ಕಾರಿ ಉದ್ಯೋಗ ಹಾಗೂ ಮಕ್ಕಳ ಶಿಕ್ಷಣದ ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಇದಲ್ಲದೆ, ಸಾಕ್ಷಿದಾರರು ಮತ್ತು ಕುಟುಂಬದವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಬಾರದು. ಕರಾವಳಿಯ ಪೊಲೀಸ್ ಠಾಣೆಗಳಲ್ಲಿ ಮೀನುಗಾರರ ರಕ್ಷಣಾ ಘಟಕ ಸ್ಥಾಪಿಸಿ, ಪೊಲೀಸರಿಗೆ ವಿಶೇಷ ತರಬೇತಿ ನೀಡಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಜಯ ಸಿ. ಸುವರ್ಣ, ಮೋಹನ್ ಬೆಂಗ್ರೆ, ಶರಣ್, ಉದಯ್ ಕುಮಾರ್, ಚಂದ್ರಕಾಂತ್, ವಿನಯ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.


