ಕೊಕ್ಕಡ: ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಶ್ರೀ ಸೌತಡ್ಕ ಮಹಾಗಣಪತಿ ದೇವಾಲಯದ ಹರಕೆ ಘಂಟೆ ಮಾರಾಟ ವಿಚಾರದಲ್ಲಿ ಬೆಳ್ತಂಗಡಿ ಶಾಸಕ ಶ್ರೀ ಹರೀಶ್ ಪೂಂಜ ವಿಧಾನಸಭೆ ಕಲಾಪದಲ್ಲಿ ದೂರು ನೀಡಿದ್ದರು. ಈ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ರಾಜ್ಯ ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಡೀ ಪ್ರಕರಣವನ್ನು ಸೂಕ್ತ ತನಿಖೆಗೆ ಒಳಪಡಿಸಿ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಮೇಲೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಇಲಾಖೆಯ ಆಯುಕ್ತರಿಗೆ ನೀಡಿದ ಆದೇಶದಲ್ಲಿ ತಿಳಿಸಿದ್ದಾರೆ.
ಅಗತ್ಯವಿದ್ದಲ್ಲಿ ಕಾರ್ಯನಿರ್ವಹಣಾ ಅಧಿಕಾರಿಯವರನ್ನು ಅಮಾನತು ಮಾಡಿ, ಪಾರದರ್ಶಕ ತನಿಖೆ ಮಾಡಬೇಕೆಂದು ಸಚಿವರು ಸೂಚಿಸಿದ್ದಾರೆ.
ಈ ಮಧ್ಯೆ ದೇವಳದ ಪ್ರಸ್ತುತ ಆಡಳಿತ ಮಂಡಳಿಯ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ, ನೂತನ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಅವರನ್ನು ನೇಮಕ ಮಾಡುವಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶಿಸಿದ್ದು, ಮುಂದಿನ ಕ್ರಮ ಜರುಗಿಸಲಾಗುವುದೆಂದು ಆಯುಕ್ತರ ಕಚೇರಿಯ ಮೂಲಗಳು ತಿಳಿಸಿದೆ.

