ರಾಜ್ಯ ಸರ್ಕಾರವು ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ಮಹತ್ವದ ಸಚಿವ ಸಂಪುಟ ಸಭೆಯನ್ನು ಆಯೋಜಿಸಿದೆ. ಈ ವಿಶೇಷ ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸ್ಪಷ್ಟಪಡಿಸಿದ್ದಾರೆ.
ಈ ಸಭೆಯಲ್ಲಿ ಕರಾವಳಿ ಭಾಗದ ಹಲವು ದೀರ್ಘಕಾಲದ ಬೇಡಿಕೆಗಳು ಮತ್ತು ಜ್ವಲಂತ ವಿಷಯಗಳು ಚರ್ಚೆಗೆ ಬರಲಿವೆ. ಮುಖ್ಯವಾಗಿ ಕಸ್ತೂರಿರಂಗನ್ ವರದಿ ಜಾರಿ, ಪ್ರವಾಸೋದ್ಯಮ ಅಭಿವೃದ್ಧಿ, ಮೂಲಸೌಕರ್ಯ ವೃದ್ಧಿ, ಕಾನೂನು ಸುವ್ಯವಸ್ಥೆ ಹಾಗೂ ಮಂಗಳೂರು ವಿಮಾನ ನಿಲ್ದಾಣದ ವಿಸ್ತರಣೆಯಂತಹ ಪ್ರಮುಖ ಯೋಜನೆಗಳ ಕುರಿತು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ.
ಇದರೊಂದಿಗೆ, ತುಳು ಭಾಷೆಗೆ ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯ ಸ್ಥಾನಮಾನ ನೀಡಬೇಕೆಂಬ ಬೇಡಿಕೆಯು ಸಭೆಯ ಪ್ರಮುಖ ಆಕರ್ಷಣೆಯಾಗಿದೆ. ಇತ್ತೀಚೆಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವಂತೆ ಮನವಿ ಸಲ್ಲಿಸಿದ್ದರು. ಈ ಎಲ್ಲಾ ಮಹತ್ವದ ವಿಷಯಗಳು ಸಂಪುಟ ಸಭೆಯ ಅಜೆಂಡಾದಲ್ಲಿರುವುದರಿಂದ ಕರಾವಳಿ ಜನರ ನಿರೀಕ್ಷೆ ಹೆಚ್ಚಾಗಿದೆ.


