ಉಡುಪಿ: ಅಜ್ಜರಕಾಡಿನ ನೂತನ ಜಿಲ್ಲಾ ಆಸ್ಪತ್ರೆಯನ್ನು ಅಗತ್ಯ ವೈದ್ಯಕೀಯ ಉಪಕರಣಗಳು ಹಾಗೂ ಸುಸಜ್ಜಿತ ಸೌಲಭ್ಯಗಳೊಂದಿಗೆ ನವೆಂಬರ್ 5ರೊಳಗೆ ಕಾರ್ಯಾರಂಭ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಆಗ್ರಹಿಸಿದ್ದಾರೆ.
ಉಡುಪಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಸ್ಪತ್ರೆ ಆರಂಭಿಸುವಂತೆ ಕರವೇ ನಡೆಸಿದ ಹೋರಾಟದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನವೆಂಬರ್ 5ರೊಳಗೆ ಆಸ್ಪತ್ರೆ ಕಾರ್ಯಾರಂಭ ಮಾಡುವ ಭರವಸೆ ನೀಡಿದೆ. ಆದರೆ, ನಿಗದಿತ ಗಡುವಿನೊಳಗೆ ಆಸ್ಪತ್ರೆ ಆರಂಭಿಸುವ ಉದ್ದೇಶದಿಂದ ಹಳೆಯ ಜಿಲ್ಲಾಸ್ಪತ್ರೆಯ ಉಪಕರಣಗಳನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಿ ಅಳವಡಿಸಲಾಗುತ್ತಿದೆ. ಈ ಕ್ರಮ ಸಂಘಟನೆಯ ಬೇಡಿಕೆಗೆ ವಿರುದ್ಧವಾಗಿದ್ದು, ಇದನ್ನು ಖಂಡಿಸುತ್ತೇವೆ ಎಂದರು.
ನೂತನ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ದೊರೆಯಲು ಅಗತ್ಯ ವೈದ್ಯಕೀಯ ಉಪಕರಣಗಳು ಮತ್ತು ಆಧುನಿಕ ಸೌಲಭ್ಯಗಳನ್ನು ಕಲ್ಪಿಸಬೇಕು. ಕೇವಲ ಕಟ್ಟಡ ಸಿದ್ಧಪಡಿಸಿ, ಹಳೆಯ ಉಪಕರಣಗಳನ್ನು ಸ್ಥಳಾಂತರಿಸುವುದರಿಂದ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಇಲಾಖೆಗಳು ಈ ಬಗ್ಗೆ ಗಂಭೀರವಾಗಿ ಗಮನಹರಿಸಿ, ನಿಗದಿತ ಸಮಯದೊಳಗೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಬಡ ರೋಗಿಗಳ ಆರೋಗ್ಯದ ವಿಚಾರದಲ್ಲಿ ಜಿಲ್ಲಾಡಳಿತ ಅಥವಾ ಸಂಬಂಧಪಟ್ಟ ಇಲಾಖೆ ನಿರ್ಲಕ್ಷ್ಯ ವಹಿಸಿದರೆ, ಈ ಹಿಂದೆ ಎಚ್ಚರಿಕೆ ನೀಡಿದಂತೆ ಸಂಘಟನೆಯ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರವೀಣ್ ಶೆಟ್ಟಿ ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಕರವೇ ರಾಜ್ಯ ಸಂಚಾಲಕ ಪ್ರಸನ್ನ ಶೆಟ್ಟಿ, ಜಿಲ್ಲಾ ಗೌರವಾಧ್ಯಕ್ಷ ಅನ್ಸರ್ ಅಹಮದ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.


