Wednesday, July 22, 2026
Homeಕರಾವಳಿಪಿಲಿಕುಳ ಮೃಗಾಲಯವನ್ನು ಅರಣ್ಯ ಇಲಾಖೆಗೆ ವರ್ಗಾಯಿಸಲು ರಾಜ್ಯ ಸರ್ಕಾರ ನಿರ್ಧಾರ

ಪಿಲಿಕುಳ ಮೃಗಾಲಯವನ್ನು ಅರಣ್ಯ ಇಲಾಖೆಗೆ ವರ್ಗಾಯಿಸಲು ರಾಜ್ಯ ಸರ್ಕಾರ ನಿರ್ಧಾರ

- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿರುವ ಪಿಲಿಕುಳ ಮೃಗಾಲಯವನ್ನು ಅರಣ್ಯ ಇಲಾಖೆಗೆ ವರ್ಗಾಯಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಪಿಲಿಕುಳ ಜೈವಿಕ ಉದ್ಯಾನವನದ ಬಳಿ ‘ಕಂಬಳ’ ಕ್ರೀಡೆ ಆಯೋಜಿಸುವುದಕ್ಕೆ ಅನುಮತಿ ನೀಡಬಾರದು ಎಂದು ಕೋರಿ ‘ಪೀಪಲ್ ಫಾರ್ ಎಥಿಕಲ್ ಟ್ರೀಟ್‌ಮೆಂಟ್ ಆಫ್ ಅನಿಮಲ್ಸ್’ (PETA) ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ಕೈಗೆತ್ತಿಕೊಂಡಿತ್ತು.

ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ಮೃಗಾಲಯದ ಉಸ್ತುವಾರಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗುವುದು ಮತ್ತು ಇದರ ಸುಗಮ ನಿರ್ವಹಣೆಗಾಗಿ ಅರಣ್ಯ ಇಲಾಖೆ, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಹಾಗೂ ರಾಜ್ಯ ಮೃಗಾಲಯ ಪ್ರಾಧಿಕಾರದ ನಡುವೆ ಶೀಘ್ರದಲ್ಲೇ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ವಿವರಿಸಿದರು.

ಅಲ್ಲದೆ, ಮೃಗಾಲಯದಲ್ಲಿರುವ 652 ಪ್ರಾಣಿಗಳ ಸುರಕ್ಷತೆ ಮತ್ತು ಕಾಳಜಿಗೆ ಸರ್ಕಾರ ಮೊದಲ ಆದ್ಯತೆ ನೀಡಿದೆ ಎಂದು ಸ್ಪಷ್ಟಪಡಿಸಿದರು. ಇದಕ್ಕೆ ರಾಷ್ಟ್ರೀಯ ಮೃಗಾಲಯ ಪ್ರಾಧಿಕಾರದ ವಕೀಲರು ಕೂಡ ತಮ್ಮದೇನೂ ಅಭ್ಯಂತರವಿಲ್ಲ ಎಂದು ಸಮ್ಮತಿ ಸೂಚಿಸಿದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠವು, ವರ್ಗಾವಣೆ ಪ್ರಕ್ರಿಯೆಯ ಸ್ವರೂಪ ಹಾಗೂ ಇದು ಕೇವಲ ಮೃಗಾಲಯದ ಭೌಗೋಳಿಕ ಪ್ರದೇಶ ಮತ್ತು ಪ್ರಾಣಿಗಳಿಗೆ ಸೀಮಿತವಾಗಿದೆಯೇ ಅಥವಾ ಇಡೀ ಜೈವಿಕ ಉದ್ಯಾನವನಕ್ಕೆ ಅನ್ವಯಿಸುತ್ತದೆಯೇ ಎಂಬ ಬಗ್ಗೆ ಸಂಪೂರ್ಣ ವಿವರಣೆ ನೀಡುವಂತೆ ಸರ್ಕಾರಕ್ಕೆ ನಿರ್ದೇಶಿಸಿ, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ಮುಂದೂಡಿತು.

- Advertisement -

Latest News

error: Content is protected !!