ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಇಂದು ರಾಜ್ಯಮಟ್ಟದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಅಚರಣೆ ಬೆಂಗಳೂರಿನಲ್ಲಿ ನಡೆಯಲಿದೆ.ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಜೆ 3.30 ಕ್ಕೆ ನಡೆಯುವ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.
ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ವಿಖ್ಯಾತಾನಂದ ಸ್ವಾಮೀಜಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಮತ್ತು ಚಿಕ್ಕಪೇಟೆ ಶಾಸಕ ಉದಯ ಗರುಡಾಚಾರ್ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆ ಸಚಿವ ರಾಜೀವ್ ಚಂದ್ರಶೇಖರ್ ಕೂಡಾ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಹ್ವಾನಿತರಾಗಿದ್ದಾರೆ.
ಕಳೆದ ವರ್ಷ ಮಂಗಳೂರಿನಲ್ಲಿ ರಾಜ್ಯ ಸರ್ಕಾರದ ವತಿಯಿಂದ ರಾಜ್ಯಮಟ್ಟದ ನಾರಾಯಣಗುರು ಜಯಂತಿಯನ್ನು ಆಚರಿಸಲಾಗಿತ್ತು.