ಮಂಗಳೂರು: ಐಷಾರಾಮಿ ಜೀವನ ನಡೆಸಲು ಮುಂಬೈಯಿಂದ ಮಂಗಳೂರಿಗೆ ಗಾಂಜಾ ತಂದು ಮಾರುತ್ತಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಉಡುಪಿ ನಿವಾಸಿ ಅಖಿಲೇಶ್ ಶೆಟ್ಟಿ ಬಂಧಿತ ಆರೋಪಿ. ಆರೋಪಿಯಿಂದ 6.7 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿ ಮುಂಬೈಯಿಂದ ಗಾಂಜಾವನ್ನು ಖರೀದಿಸಿಕೊಂಡು ಬಂದು ಮುಲ್ಕಿ ಪರಿಸರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ಮುಲ್ಕಿ ಬಪ್ಪನಾಡು ಪರಿಸರದಲ್ಲಿ ದಾಳಿ ನಡೆಸಿ ಆರೋಪಿಯನ್ನು ಗಾಂಜಾ ಸಹಿತ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 1,62,000/- ರೂ ಮೌಲ್ಯದ 6.7 ಕೆಜಿ ನಿಷೇಧಿತ ಮಾದಕ ವಸ್ತು ಗಾಂಜಾ, ಮೊಬೈಲ್ ಫೋನ್, ನಗದು ಹಣ ರೂ. 660/- ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 1,63,000/-ಆಗಬಹುದು. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿ ಐಷಾರಾಮಿ ಜೀವನ ನಡೆಸಲು ಈ ರೀತಿ ಮಾಡುತ್ತಿದ್ದ ಎನ್ನಲಾಗಿದೆ. ಈತನ ವಿರುದ್ಧ ಈ ಹಿಂದೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ, ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟದ ಪ್ರಕರಣ, ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಉಡುಪಿ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆ ಮಾಡಿದ ಪ್ರಕರಣ ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿವೆ.