ಮಂಗಳೂರು: ಡೊಂಗರಕೇರಿಯ ಸುಧೀಂದ್ರ ಸಭಾಭವನದಲ್ಲಿ ಮಂಗಳವಾರ ನಡೆದ ಬಿಜೆಪಿ ಮಂಗಳೂರು ನಗರ ದಕ್ಷಿಣ ಮ೦ಡಲದ ನೂತನ ಪದಾಧಿಕಾರಿಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ’ತಾವರೆ ಚಿಹ್ನೆಯೇ ನಮ್ಮ ಅಭ್ಯರ್ಥಿ. ನಮಗೆ ಅಭ್ಯರ್ಥಿ ಯಾರೆಂಬುದು ಮುಖ್ಯವಲ್ಲ, ಆದ್ದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಹುಮತಗಳ ಅಂತರದಿಂದ ಬಿಜೆಪಿಯನ್ನು ಗೆಲ್ಲಿಸಬೇಕು. ಅದುವೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ನಾವು ಕೊಡುವ ಗೌರವ,’ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಕರೆ ನೀಡಿದರು.
ಸಾಮಾನ್ಯ ಕಾರ್ಯಕರ್ತನೂ ಪಕ್ಷದ ಉನ್ನತ ಹುದ್ದೆ ಹೊಂದುವುದು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ವಿರೋಧ ಪಕ್ಷಗಳು ಬಿಜೆಪಿಯನ್ನು ಸೋಲಿಸಲು 1 ವರ್ಷದಿಂದ ಸಿದ್ಧತೆ ನಡೆಸುತ್ತಿದ್ದರೂ ಅಭ್ಯರ್ಥಿಗಳನ್ನು ಘೋಷಿಸಲು ಹಿಂದುಮುಂದು ನೋಡುತ್ತಿವೆ. ಆದರೆ ಬಿಜೆಪಿಯಲ್ಲಿ ಎಲ್ಲಾ ಸೀಟುಗಳಿಗೆ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗಿದೆ. ಮಂಡಲ ಸಮಿತಿಯಲ್ಲಿ ಎಲ್ಲಾ ಸಮುದಾಯದವರಿಗೂ ಅವಕಾಶ ನೀಡಲಾಗಿದ್ದು, ಜವಾಬ್ದಾರಿ ಹಂಚಲಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಸಂವಿಧಾನದ ಆಶಯಗಳನ್ನು ಅನುಷ್ಠಾನಗೊಳಿಸಿ, ಅದಕ್ಕೆ ಬದ್ಧವಾಗಿ ಕಾರ್ಯನಿರ್ವಹಿಸುವ ಪಕ್ಷವಿದ್ದರೆ ಅದು ಬಿಜೆಪಿ ಮಾತ್ರ. ಸಾಮಾನ್ಯ ಕಾರ್ಯಕರ್ತನೂ ಎತ್ತರಕ್ಕೆ ಬೆಳೆಯುವ ಅವಕಾಶ ನೀಡುತ್ತದೆ ಎಂದರು.
ರಮೇಶ್ ಕಂಡೆಟ್ಟು ಅವರಲ್ಲಿ ಫಲಿತಾಂಶ ಆಧಾರಿತ ಕೆಲಸ ಮಾಡುವ ಸಾಮರ್ಥ್ಯವಿದೆ. ನಿರಂತರವಾಗಿ ಪಕ್ಷ ಸಂಘಟನೆಯ ಜವಬ್ದಾರಿಯನ್ನು ಶತಯಜ್ಞದಂತೆ ನಿರ್ವಹಿಸಬೇಕು. ನರೇಂದ್ರ ಮೋದಿ ಅವರು ಪ್ರಧಾನಿಯಾಗಬೇಕಾದ ಪ್ರಾಮುಖ್ಯತೆಯನ್ನು ಮನೆಮನೆಗೆ ತಿಳಿಸುವ ಕಾರ್ಯವಾಗಬೇಕು ಎಂದು ಹೇಳಿದರು.
ಮಂಗಳೂರು ನಗರ ದಕ್ಷಿಣ ಮಂಡಲದ ನಿರ್ಗಮಿತ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ ನೂತನ ಅಧ್ಯಕ್ಷ ರಮೇಶ್ ಕಂಡಟ್ಟು ಅವರಿಗೆ ಪಕ್ಷದ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ. ಬ್ರಿಜೇಷ್ ಚೌಟ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪಮೇಯ ಸುನೀತಾ, ದ.ಕ. ಲೋಕಸಭಾ ಚುನಾವಣಾ ಉಸ್ತುವಾರಿ ನಿತಿನ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕಡೆಂಜಿ, ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ನೂತನ ಪದಾಧಿಕಾರಿಗಳು ಇದ್ದರು.