ಮಂಗಳೂರು : ಬಂಟ್ವಾಳ ತಾಲೂಕು ಕಚೇರಿಗೆ ಆ.13 ರಂದು ಮಧ್ಯಾಹ್ನ ಲೋಕಾಯುಕ್ತ ದಾಳಿ ನಡೆದಿದ್ದು, ಲಂಚ ಸ್ವೀಕರಿಸುತ್ತಿದ್ದ ಉಪತಹಶೀಲ್ದಾರ್ ಸಹಿತ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪ್ರಕರಣದಲ್ಲಿ ತಹಶೀಲ್ದಾರ್ ಪಾತ್ರ ಇದೆಯೇ ಎಂಬುದನ್ನು ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಪ್ರಥಮ ದರ್ಜೆ ಸಹಾಯಕ ಸಂತೋಷ್ ಹಾಗೂ ಮಧ್ಯವರ್ತಿ ವಾಮದಪದವು ನಿವಾಸಿ ಗಣೇಶ್ ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಸಜೀಪಮುನ್ನೂರಿನ ಪುಷ್ಪರಾಜ್ ಅವರ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ಬಿ.ಸಿ.ರೋಡಿನ ದೇವಸ್ಥಾನವೊಂದರ ಬಳಿ ಜಾಗದ ವಿಚಾರದಲ್ಲಿ ಮಧ್ಯವರ್ತಿಯ ಮೂಲಕ 20 ಸಾವಿರ ಲಂಚ ಸ್ವೀಕಾರ ಮಾಡುವ ಸಂದರ್ಭದಲ್ಲಿ ಲೋಕಾಯುಕ್ತ ದಾಳಿ ಮಾಡಿ ಮೂವರನ್ನು ಬಂಧಿಸಿದ್ದಾರೆ.
ಲೋಕಾಯುಕ್ತ ಎಸ್ಪಿ ಪ್ರಭಾರ ಕುಮಾರಚಂದ್ರ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಡಿವೈಎಸ್ಪಿಗಳಾದ ಗಾನಾ ಪಿ.ಕುಮಾರ್, ಸುರೇಶ್ ಕುಮಾರ್, ಇನ್ಸ್‌ಪೆಕ್ಟರ್ ಚಂದ್ರಶೇಖರ, ಭಾರತಿ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.



