ಮಂಗಳೂರು: ಪರಿಸರವನ್ನು ಸಂರಕ್ಷಿಸುವ ಪರಿಸರ ಪ್ರವಾಸೋದ್ಯಮಕ್ಕೆ ದ.ಕ. ಜಿಲ್ಲೆಯಲ್ಲಿ ಆದ್ಯತೆ ನೀಡಲಾಗುತ್ತಿದ್ದು, ಅದಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ತಣ್ಣೀರುಬಾವಿಯ ಅರಣ್ಯ ಇಲಾಖೆಯಲ್ಲಿ ಜನಪ್ರತಿನಿಧಿಗಳು ಹಾಗೂ ಸಂಬಂಧಿತ ಅಧಿಕಾರಿಗಳೊಂದಿಗೆ ರವಿವಾರ ಸಭೆ ನಡೆಸಿ ಅವರು ಮಾತನಾಡಿದರು.
ಸಸಿಹಿತ್ಲು ಹಾಗೂ ತಣ್ಣೀರುಬಾವಿ ಕಡಲತೀರಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್ ವತಿಯಿಂದ ಮೂಲ ಸೌಕರ್ಯಗಳನ್ನು ಅಭಿವೃದ್ಧಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವ ಬಗ್ಗೆ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಸಿಆರ್‌ಝಡ್ ಉಲ್ಲಂಘನೆಯಾಗದಂತೆ ಅಭಿವೃದ್ಧಿಗೆ ಕ್ರಮ ವಹಿಸುವಂತೆ ಅವರು ಸೂಚಿಸಿದರು. ಇದಕ್ಕೂ ಮುನ್ನ ಅವರು ಸಸಿಹಿತ್ಲು, ತಣ್ಣೀರುಬಾವಿ ಕಡಲ ತೀರಗಳನ್ನು ಪರಿಶೀಲಿಸಿದರು. ಶಾಸಕರಾದ ಡಾ| ವೈ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಉಪಸ್ಥಿತರಿದ್ದರು.